ಬೆಂಗಳೂರಿನಲ್ಲೇ ನಡೆಯಲಿದೆ 13 ನೇ ʼಏರೋ ಇಂಡಿಯಾʼ ಶೋ - Mahanayaka
6:05 PM Wednesday 30 - October 2024

ಬೆಂಗಳೂರಿನಲ್ಲೇ ನಡೆಯಲಿದೆ 13 ನೇ ʼಏರೋ ಇಂಡಿಯಾʼ ಶೋ

07/10/2020

ಬೆಂಗಳೂರು: ಬೆಂಗಳೂರಿನಲ್ಲಿ 2021 ರ ಫೆಬ್ರವರಿ 3 ರಿಂದ 7, ರವರೆಗೆ 13 ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ – ಏರೋ ಇಂಡಿಯಾ 2021 ಆಯೋಜಿಸಲಾಗುವುದು.

ಕೇಂದ್ರದ ರಕ್ಷಣಾ ಇಲಾಖೆಯು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಇಂದು ಆಯೋಜಿಸಿದ್ದ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ – ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಸಂಬಂಧಿಸಿದ ರಾಯಭಾರಿಗಳ ವರ್ಚುಯಲ್ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಕಳೆದ 12 ಏರ್ ಶೋ ಆವೃತ್ತಿಗಳಿಗೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಉತ್ತಮ ಅನುಭವವನ್ನು ಹೊಂದಿದೆ. ಫೆಬ್ರವರಿ 3 ರಿಂದ 7 ರವರೆಗೆ ಆಯೋಜಿಸಿರುವ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ – ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಈ ಬಾರಿಯೂ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಏರೋ ಇಂಡಿಯಾ 2021ರ ವೆಬ್‍ಸೈಟ್ ಪ್ರಾರಂಭವಾದ ಕೂಡಲೇ ವಸ್ತು ಪ್ರದರ್ಶನಕ್ಕಾಗಿ ಈಗಾಗಲೇ ಆಸಕ್ತರು ಬಹುಪಾಲು ಸ್ಥಳವನ್ನು ಕಾಯ್ದಿರಿಸಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಸರ್ಕಾರ ಅನೇಕ ಪೂರಕ ಕ್ರಮಗಳನ್ನು ಕೈಗೊಂಡಿದ್ದು, ಭಾರತ ಸರ್ಕಾರದ ಆರೋಗ್ಯ ಸಚಿವಾಲಯದ ಎಲ್ಲ ಮಾರ್ಗಸೂಚಿಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಭಾಗವಹಿಸುವ ಅಂತರರಾಷ್ಟ್ರೀಯ ಗಣ್ಯರು, ಅಧಿಕಾರಿ/ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಥರ್ಮಲ್ ಸ್ಕ್ರೀನಿಂಗ್, ಕಾಲಕಾಲಕ್ಕೆ ಸ್ಯಾನಿಟೈಸೇಷನ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳುವುದು ಮುಂತಾದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು.

ಭಾರತದ ವೈಮಾನಿಕ ಮತ್ತು ಬಾಹ್ಯಾಕಾಶ ಉದ್ಯಮಕ್ಕೆ ಕರ್ನಾಟಕ ರಾಜ್ಯ ಶೇ. 25 ರಷ್ಟು ಕೊಡುಗೆ ನೀಡುತ್ತಿದೆ. ಭಾರತದ ವೈಮಾನಿಕ ಸಂಬಂಧಿತ ರಫ್ತಿಗೆ ಶೇ.65% ರಷ್ಟು ಹಾಗೂ ರಕ್ಷಣಾ ವಲಯದ ಸೇವೆಗಳಿಗಾಗಿ ಹೆಲಿಕಾಪ್ಟರ್ ಮತ್ತು ವಿಮಾನ ಉತ್ಪಾದನೆಗೆ ಶೇ.67 ಕೊಡುಗೆ ನೀಡುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ಸಭೆಯ ಅಧ್ಯಕ್ಷತೆ ವಹಿಸಿದ್ದ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಮಾತನಾಡಿ, ಶಾಂತಿಗಾಗಿ ರಕ್ಷಣಾ ಇಲಾಖೆಯನ್ನು ಇನ್ನಷ್ಟು ಸಬಲಗೊಳಿಸಲು ಪೂರಕವಾಗಿ ರಕ್ಷಣಾ ನೀತಿಯನ್ನು ಅಳವಡಿಸಿಕೊಳ್ಳುವುದೇ ನಮ್ಮ ಉದ್ದೇಶ. ಭಾರತವು ಅತಿ ದೊಡ್ಡ ರಕ್ಷಣಾ ಉತ್ಪಾದನಾ ವಲಯವನ್ನು ಹೊಂದಿದೆ. ಏರೋ ಇಂಡಿಯಾ 2021 ಮೂಲಕ ಭಾರತ ವೈಮಾನಿಕ ಮತ್ತು ಬಾಹ್ಯಾಕಾಶ ಉದ್ಯಮದಲ್ಲಿ ಮುಂಚೂಣಿಯ ಐದು ರಾಷ್ಟ್ರಗಳಲ್ಲಿ ಒಂದಾಗಿರಬೇಕು ಎನ್ನುವುದು ನಮ್ಮ ಆಶಯವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್, ವಿವಿಧ ದೇಶಗಳ ರಾಯಭಾರಿಗಳು, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ