ಜಿಲ್ಲಾಸ್ಪತ್ರೆ ಆವರಣದಲ್ಲಿ ರೀಲ್ಸ್ ಮಾಡಿದ್ದಕ್ಕೆ 38 ಮಂದಿ ವಿದ್ಯಾರ್ಥಿಗಳ ಅಮಾನತು!
ಗದಗ: ಜಿಲ್ಲಾಸ್ಪತ್ರೆಯಲ್ಲಿ ರೀಲ್ಸ್ ಮಾಡಿದ್ದಕ್ಕೆ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್) 38 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ಜಿಲ್ಲಾಸ್ಪತ್ರೆಯ ಕಾರಿಡಾರ್ ನಲ್ಲಿ ರೀಲ್ಸ್ ಮಾಡುತ್ತಿದ್ದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ 38 ಮಂದಿ ವಿದ್ಯಾರ್ಥಿಗಳಿಗೆ ಅಮಾನತು ಶಿಕ್ಷೆ ನೀಡಲಾಗಿದೆ.
ಆಸ್ಪತ್ರೆ ಕಾರಿಡಾರ್ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮಾಡಿದ್ದ ರೀಲ್ಸ್ ಸಾಕಷ್ಟು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ಅಮಾನತು ಮಾಡಿ ಜೀಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
ಎಂಬಿಬಿಎಸ್ ಇಂಟರ್ನ್ಶಿಪ್ ವಿದ್ಯಾರ್ಥಿಗಳು ಅನುಮತಿ ಪಡೆಯದೇ ಜಿಲ್ಲಾ ಆಸ್ಪತ್ರೆಯ ವಿವಿಧೆಡೆ ರೀಲ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಏಪ್ರಿಲ್ನಲ್ಲಿ ಪದವಿ ಪೂರ್ಣಗೊಳ್ಳುವ ಸಂಭ್ರಮದಲ್ಲಿ ಯಾರಿಗೂ ತೊಂದರೆ ಆಗದಂತೆ ರೀಲ್ಸ್ ಮಾಡಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ್ದು ತಪ್ಪು ಎಂದು ಜಿಮ್ಸ್ ನ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಡಿಸ್ಟ್ರಿಕ್ಟ್ ಸರ್ಜನ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ತೀರ್ಮಾನಿಸಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ.
ಆಸ್ಪತ್ರೆ ಆವರಣದಲ್ಲಿ ರೀಲ್ಸ್ ಮಾಡಿದ ಕಾರಣವನ್ನು ಮುಂದಿಟ್ಟುಕೊಂಡು ಅಮಾನತು ಮಾಡಿ, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಿರೋದು ಎಷ್ಟು ಸರಿ, ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿ ತಿದ್ದ ಬಹುದಿತ್ತು ಎನ್ನುವ ಅಭಿಪ್ರಾಯಗಳು ಕೂಡ ಕೇಳಿ ಬಂದಿದೆ.