ಮೂರನೇ ಅಲೆ ತಡೆಗಟ್ಟಲು ಕೋವಿಡ್ ಪರೀಕ್ಷೆ ಹೆಚ್ಚಿಸಿ: ಸಚಿವ ಡಾ.ಕೆ.ಸುಧಾಕರ್ - Mahanayaka
9:35 AM Thursday 14 - November 2024

ಮೂರನೇ ಅಲೆ ತಡೆಗಟ್ಟಲು ಕೋವಿಡ್ ಪರೀಕ್ಷೆ ಹೆಚ್ಚಿಸಿ: ಸಚಿವ ಡಾ.ಕೆ.ಸುಧಾಕರ್

k sudhakar
19/08/2021

ಬೆಂಗಳೂರು ಗ್ರಾಮಾಂತರ: ರಾಜ್ಯ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಗಳನ್ನು ಪಾಲಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹಾಗೂ ಲಸಿಕಾಕರಣ ಹೆಚ್ಚಿಸುವ ಮೂಲಕ ಕೋವಿಡ್-19ರ ಮೂರನೇ ಅಲೆ ತಡೆಗಟ್ಟಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಸಚಿವರಾದ ಡಾ. ಕೆ.ಸುಧಾಕರ್ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವುದರಿಂದ, ಸೋಂಕು ಮತ್ತಷ್ಟು ಉಲ್ಬಣಗೊಳ್ಳದಂತೆ ತಡೆಯಬಹುದು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಕೋವಿಡ್ ನಿಂದ ಗುಣಮುಖರಾದವರ ಪೈಕಿ ರಾಜ್ಯದಲ್ಲಿ 23 ಕ್ಷಯ ರೋಗ ಪತ್ತೆಯಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ನಿಂದ ಗುಣಮುಖರಾಗಿರುವ 60,121 ಮಂದಿಗೂ ಕ್ಷಯಪರೀಕ್ಷೆ ಮಾಡಿಸುವುದರಿಂದ ಕ್ಷಯರೋಗವನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನಿಗದಿಪಡಿಸಿರುವ ಗುರಿಗಳನ್ವಯ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ವಿಳಂಬ ಮಾಡದೆ ವರದಿಗಳನ್ನು ನೀಡಿ, ಕೋವಿಡ್ ಸೋಂಕು ದೃಢ ಪಟ್ಟ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವ ಬದಲು, ಹೋಂ ಐಸೋಲೇಶನ್ ಮಾಡಲು ಗ್ರಾಮಾಂತರ ಪ್ರದೇಶದಲ್ಲಿ ಸೌಲಭ್ಯಗಳ ಕೊರತೆ ಇರುವುದರಿಂದ ವೈದ್ಯರ ಸಲಹೆ ಮೇರೆಗೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ದಾಖಲಿಸಬೇಕು ಎಂದರಲ್ಲದೆ, ಹೆಚ್ಚು ಸೋಂಕಿತ ಪ್ರಕರಣಗಳು ದಾಖಲಾದ್ದಲ್ಲಿ, ಮೈಕ್ರೋ ಕಂಟೈನ್‌ಮೆಂಟ್ ವಲಯ ಮಾಡಬೇಕು ಎಂದರು. ರಾಜ್ಯದಲ್ಲಿ ಶೀಘ್ರವೇ ಮಕ್ಕಳಿಗಾಗಿಯೇ “ಆರೋಗ್ಯ ನಂದನ” ಎಂಬ ವಿಶೇಷ ಆರೋಗ್ಯ ಯೋಜನೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ರಾಜ್ಯದಲ್ಲಿರುವ ಮಕ್ಕಳನ್ನು ತಪಾಸಣೆಗೆ ಒಳಪಡಿಸಿ, ಅಪೌಷ್ಟಿಕತೆ, ರಕ್ತಹೀನತೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆರೈಕೆ, ಕಾಳಜಿ ಹಾಗೂ ಚಿಕಿತ್ಸೆ ನೀಡುವ ಮೂಲಕ ಮಕ್ಕಳಿಗೆ ಕೋವಿಡ್ ಮೂರನೇ ಅಲೆ ಪರಿಣಾಮಕಾರಿಯಾಗದಂತೆ ತಡೆಯಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿಗಳ ಬಳಿ ಚರ್ಚಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಜಿಲ್ಲಾ ಆಸ್ಪತ್ರೆಯನ್ನು ಮಂಜೂರು ಮಾಡಿಸಲಾಗುವುದು. ಅಲ್ಲದೇ ಹೊಸಕೋಟೆ ತಾಲ್ಲೂಕಿಗೆ ತಾಯಿ ಮತ್ತು ಮಗುವಿನ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ತಾಲ್ಲೂಕಿನಲ್ಲಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ, ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು. ಜಿಲ್ಲೆಗೆ ಈಗಾಗಲೇ 29 ವೈದ್ಯರನ್ನು ನೇಮಕ ಮಾಡಲಾಗಿದ್ದು, ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಾಲ್ಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಹಾಗೂ ಪ್ರತಿ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಆರೋಗ್ಯ ಸೇವೆಯ ಬಗ್ಗೆ ಪರಿಶೀಲನೆ ನಡೆಸಬೇಕು ಮತ್ತು ಅಲ್ಲಿನ ಮೂಲಭೂತ ಸೌಕರ್ಯ ಹಾಗೂ ಸೇವೆಯ ಬಗ್ಗೆ ಮಾಹಿತಿ ದಾಖಲಿಸಬೇಕು ಎಂದು ಹೇಳಿದರು. ಡಿಸೆಂಬರ್ ಅಂತ್ಯಕ್ಕೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ 4,20,360 ಮೊದಲ ಡೋಸ್, 1,20,756 ಎರಡನೇ ಡೋಸ್ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಗೆ ಹೆಚ್ಚಿನ ಲಸಿಕೆ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.




ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಆಗಸ್ಟ್ 23ರಿಂದ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎಂದರಲ್ಲದೆ, ಮಕ್ಕಳ ಆರೋಗ್ಯವೂ ಮುಖ್ಯವಾಗಿರುವುದರಿಂದ ಆರೋಗ್ಯ ಇಲಾಖೆ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು. ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆಗೆ ಸಾರ್ವಜನಿಕರು ಸಹಕರಿಸಬೇಕು ಎಂದರಲ್ಲದೆ, ಮಾರುಕಟ್ಟೆ, ಮದುವೆ, ಜಾತ್ರೆ, ಸಭೆ-ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ಕ್ರಮ ವಹಿಸಬೇಕು ಹಾಗೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ)ಅವರು ಮಾತನಾಡಿ, ಕೋವಿಡ್ ಲಸಿಕೆ ಪಡೆಯಲು ಪ್ರಾರಂಭದಲ್ಲಿ ಹಿಂದೇಟು ಹಾಕುತ್ತಿದ್ದ ಜನರು, ಪ್ರಸ್ತುತ ಲಸಿಕೆ ಪಡೆಯಲು ಹೆಚ್ಚು ಮಂದಿ ಆಗಮಿಸುತ್ತಿದ್ದು, ಜಿಲ್ಲೆಗೆ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡುವಂತೆ ಆರೋಗ್ಯ ಸಚಿವರಿಗೆ ಮನವಿ ಮಾಡಿದರು.

ಸಭೆಯಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ