ರೋಹಿಣಿ ಸಿಂಧೂರಿ- ಶಿಲ್ಪಾನಾಗ್ ವರ್ಗಾವಣೆ: ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ರೋಹಿಣಿ
06/06/2021
ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿ ಕೊನೆಗೂ ವರ್ಗಾವಣೆ ಆದೇಶದಲ್ಲಿ ಕೊನೆಗೊಂಡಿದ್ದು, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ವರ್ಗಾವಣೆ ಆದೇಶದ ಬೆನ್ನಲ್ಲೇ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದಾರೆ. “ನನ್ನಿಂದ ಯಾವುದೇ ತಪ್ಪುಗಳಾಗಿಲ್ಲ” ಎಂದು ಮನವರಿಕೆ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದ್ದು, ಆದರೆ, ವರ್ಗಾವಣೆ ತಡೆಯಲು ಸಾಧ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಸುಮಾರು ಅರ್ಧಗಂಟೆಗಳ ಕಾಲ ಸಿಎಂ ನಿವಾಸದಲ್ಲಿದ್ದ ರೋಹಿಣಿ ಸಿಂಧೂರಿ ಅವರು ಸಿಎಂ ಯಡಿಯೂರಪ್ಪನವರ ಮನವೊಲಿಕೆಗೆ ಪ್ರಯತ್ನಿಸಿದ್ದಾರೆ. ಆದರೆ ಅವರ ಮನವಿಗೆ ಸಿಎಂ ಒಪ್ಪಿಗೆ ಸೂಚಿಸಿಲ್ಲ ಎಂದು ತಿಳಿದು ಬಂದಿದೆ. ಸದ್ಯ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ ಎಂದು ತಿಳಿದು ಬಂದಿದೆ.