ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಯಡಿಯೂರಪ್ಪ ಗ್ರೀನ್ ಸಿಗ್ನಲ್
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್ ತೋರಿಸಿದ್ದು, ಜುಲೈ 22 ರವರೆಗೆ ಒಂದು ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟು ಮೀರದಂತೆ ಗ್ರೂಪ್ ಬಿ ಮತ್ತು ಸಿ ವರ್ಗದ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ಸರಕಾರ ಆದೇಶ ಹೊರಡಿಸಿದೆ.
ಸಾರ್ವತ್ರಿಕ ವರ್ಗಾವಣೆಯನ್ನು ಆಯಾ ಇಲಾಖೆಗಳ ಸಚಿವರಿಗೆ ವಹಿಸಲಾಗಿದೆ. 2021-22ನೇ ಸಾಲಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಸಿ ವರ್ಗದ ಅಧಿಕಾರಿ, ನೌಕರರಿಗೆ ಮಾತ್ರ ಅನ್ವಯವಾಗುವಂತೆ ಮಿತಿಗೊಳಿಸಿ, ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ ಎಂದು ವರದಿಯಾಗಿದೆ.
ಸಂಪುಟ ಸಭೆಯಲ್ಲಿ ಅನೇಕ ಸಚಿವರು ವರ್ಗಾವಣೆಗೆ ಅವಕಾಶ ನೀಡುವಂತೆ ಒತ್ತಡ ಹೇರಿದ್ದರು. ವರ್ಗಾವಣೆ ಬಗ್ಗೆ ಸಚಿವರಿಗೆ ಅಧಿಕಾರ ನೀಡಲು ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ 10 ಸಚಿವರು ಒತ್ತಡ ಹೇರಿದ್ದರೆನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಸಿಎಂ ವರ್ಗಾವಣೆಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗಿದೆ.
ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ ಎಂದು ತಿಳಿದು ಬಂದಿದೆ.