ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನ - Mahanayaka
4:57 PM Wednesday 11 - December 2024

ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನ

uppinangady crime news
19/07/2021

ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು,  ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

41 ವರ್ಷ ವಯಸ್ಸಿನ ರುಕ್ಮಯ ಮಡಿವಾಳ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದು, ಈತ ಕೊಕ್ಕಡ ನಿವಾಸಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ 16 ವರ್ಷ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿ, ಉಪ್ಪಿನಂಗಡಿಯ ಕಡೆಗೆ ಕರೆದುಕೊಂಡು ಹೋದ ಆರೋಪಿಯು, ಬಾಲಕಿಗೆ  ಲೈಂಗಿಕ ಕಿರುಕುಳ ನೀಡಿದ್ದು, ಅತ್ಯಾಚಾರಕ್ಕೂ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಾಡಿದಾಗ ಆತ ಹೆದರಿ, ಬಾಲಕಿಯನ್ನು ವಾಪಸ್ ತಂದು ಬಿಟ್ಟಿದ್ದು, ಯಾರಿಗಾದರೂ ಇದರ ಬಗ್ಗೆ ಹೇಳಿದರೆ ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಹೇಳಲಾಗಿದೆ.

ಬಾಲಕಿಯ ತಂದೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು, ಘಟನೆ ಸಂಬಂಧ ಬಾಲಕಿಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ