ಪರಸ್ಪರ ಕೈ ಮಿಲಾಯಿಸಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು
30/11/2020
ಕಂಪ್ಲಿ: ವಿಜಯ ನಗರ ಜಿಲ್ಲೆಯಿಂದ ಕಂಪ್ಲಿ ತಾಲೂಕನ್ನು ಕೈ ಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಂಪ್ಲಿ ತಾಲೂಕು ಬಂದ್ ಮಾಡಲಾಗಿದ್ದು, ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಕೈ ಮಿಲಾಯಿಸಿಕೊಂಡಿದ್ದಾರೆ.
ಕಂಪ್ಲಿ ತಾಲೂಕು ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ತಾಲೂಕು ಬಂದ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಂಪ್ಲಿ ಶಾಸಕ ಗಣೇಶ್ ಕೂಡ ಇದ್ದರು ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಇದೇ ಸಂದರ್ಭದಲ್ಲಿ ತೀವ್ರ ಮಾತಿನ ಚಕಮಕಿ ನಡೆದು, ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕ ಗಣೇಶ್, ಕಂಪ್ಲಿ ವಿಜಯನಗರದ ಹೆಬ್ಬಾಗಿಲು, ಇದೀಗ ಕಂಪ್ಲಿ ತಾಲೂಕನ್ನೇ ಕೈಬಿಟ್ಟು ವಿಜಯನಗರವನ್ನು ಪ್ರತ್ಯೇಕ ಜಿಲ್ಲೆ ಮಾಡಿರುವುದು ರಾಜ್ಯ ಸರ್ಕಾರದ ಹಿಟ್ಲರ್ ಆಡಳಿತಕ್ಕೆ ಸಾಕ್ಷಿ. ರಾಜಕೀಯ ದುರುದ್ದೇಶದಿಂದ ಸರ್ಕಾರ ಇಂತಹ ಕ್ರಮಕ್ಕೆ ಮುಂದಾಗಿರುವುದು ಖಂಡನೀಯ, ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.