ಪ್ರಧಾನಿ ಮಂಗಳೂರು ಭೇಟಿ: “ಉಡುಪಿಯಿಂದ 20 ಸಾವಿರ ಜನ ಭಾಗಿಯಾಗಲಿದ್ದಾರೆ” - Mahanayaka
1:01 PM Thursday 12 - December 2024

ಪ್ರಧಾನಿ ಮಂಗಳೂರು ಭೇಟಿ: “ಉಡುಪಿಯಿಂದ 20 ಸಾವಿರ ಜನ ಭಾಗಿಯಾಗಲಿದ್ದಾರೆ”

udupi bjp
30/08/2022

ಉಡುಪಿ: ಸೆ.2ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ 1 ಗಂಟೆಗೆ ಮಂಗಳೂರಿನ ಬಂಗ್ರಕೂಳೂರು ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸುವ ಈ ಸಮಾವೇಶವನ್ನು ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸೇರಿ ಸಂಘಟಿತ ಪ್ರಯತ್ನದಿಂದ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಹೇಳಿದರು.

ಮಂಗಳವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅವಿಭಜಿತ ದ.ಕ. ಜಿಲ್ಲೆಯ ಕೇಂದ್ರ ಮತ್ತು ರಾಜ್ಯ ಸರಕಾರದ ಸಚಿವರು, ಎಲ್ಲಾ ಶಾಸಕರು ಹಾಗೂ ಇನ್ನಿತರ ಪ್ರಮುಖರು ಪ್ರಧಾನಿಯವರ ಈ ಸರಕಾರಿ ಕಾರ್ಯಕ್ರಮದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಉಡುಪಿ ಜಿಲ್ಲೆಯಿಂದ ಸುಮಾರು 20 ಸಾವಿರ ಮಂದಿ ಸಮಾವೇಶದಲ್ಲಿ ಭಾಗವಹಿಸಲು ಕಾರ್ಯ ಯೋಜನೆಯನ್ನು ರೂಪಿಸಲಾಗಿದೆ. ಈ ಬಗ್ಗೆ ಈಗಾಗಲೇ ಮಂಡಲವಾರು ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದ್ದು, ಫಲಾನುಭವಿಗಳ ಸಹಿತ ಎಲ್ಲಾ ಅಪೇಕ್ಷಿತರು ಬೆಳಿಗ್ಗೆ 12 ಗಂಟೆಯೊಳಗೆ ಸಭಾಂಗಣದಲ್ಲಿ ಉಪಸ್ಥಿತರಿರುವಂತೆ ಪೂರ್ವಸಿದ್ಧತೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದರು.

ಉಡುಪಿ ಜಿಲ್ಲೆಯಾದ್ಯಂತ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಅಪ್ರತಿಮ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವಂತೆ ವಿನಂತಿಸಲಾಗಿದ್ದು, ಉತ್ತಮ ಸ್ಪಂದನೆ ದೊರೆತಿದೆ. ಸಾವರ್ಕರ್  ಹೋರಾಟ, ಜೀವನಾದರ್ಶಗಳ ಮಾಹಿತಿಯನ್ನೊಳಗೊಂಡಿರು ಪುಸ್ತಕಗಳ ಮಾರಾಟ ಮಳಿಗೆ ತೆರೆಯುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಉಡುಪಿಯ ಜಿಲ್ಲಾ ಖಜಾನೆ ಕಛೇರಿಯ ಬಳಿ ವೀರ ಸಾವರ್ಕರ್ ವೃತ್ತ ನಿರ್ಮಾಣದ ಪ್ರಕ್ರಿಯೆ ಪ್ರಗತಿಯಲ್ಲಿದೆ. ಯುವ ಸಮುದಾಯಕ್ಕೆ ಸಾವರ್ಕರ್ ದೇಶ ಪ್ರೇಮ, ಚಿಂತನೆ, ಹೋರಾಟ, ತ್ಯಾಗ, ಬಲಿದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾಲೇಜುಗಳಲ್ಲಿ ವಿಚಾರ ಸಂಕಿರಣ ನಡೆಸಲು ಚಿಂತನೆ ನಡೆಸಲಾಗಿದೆ. ವಿರೋಧ ಪಕ್ಷಗಳು ವೀರ ಸಾವರ್ಕರ್ ರವರ ಸ್ವಾತಂತ್ರ್ಯ ಹೋರಾಟದ ನೈಜ ವಿಚಾರವನ್ನು ಅರಿತುಕೊಂಡು, ಸಾವರ್ಕರ್ ಕುರಿತು ಕ್ಷುಲ್ಲಕವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು.

ಭಾರತವನ್ನು ತುಂಡು ಮಾಡಿರುವ ಕಾಂಗ್ರೆಸ್ ಪಕ್ಷ ಇದೀಗ ಭಾರತ್ ಜೋಡೋ ಪಾದಯಾತ್ರೆಯನ್ನು ನಡೆಸಲು ಮುಂದಾಗಿರುವುದು ಹಾಸ್ಯಾಸ್ಪದವಾಗಿದೆ. ಕಾಂಗ್ರೆಸಿಗರಿಗೆ ಭಾರತವನ್ನು ಜೋಡಿಸಲು ಎಂದಿಗೂ ಸಾಧ್ಯವಾಗದು. ಭಾರತ್ ಜೋಡೋ ಅಭಿಯಾನದ ಮೊದಲು ಕಾಂಗ್ರೆಸ್ ಪಕ್ಷವನ್ನು ತೊರೆದು ತಂಡೋಪತಂಡವಾಗಿ ಹೊರ ಹೋಗುತ್ತಿರುವ ಕಾಂಗ್ರೆಸ್ ಮುಖಂಡರನ್ನು ಉಳಿಸಿಕೊಳ್ಳುವ ಪ್ರಯತ್ನದ ಭಾಗವಾಗಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಕಾಂಗ್ರೆಸ್ ಜೋಡೋ ಅಭಿಯಾನ ನಡೆಸುವುದು ಉತ್ತಮ ಎಂದು ಕುಯಿಲಾಡಿ ಹೇಳಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬೂಬಕರ್ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ