ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲು ಕರಾವಳಿಯ ಸಂತರ ಆಗ್ರಹ
ಉಡುಪಿ: ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಸಲ್ಲಿಸಿದ್ದೇವೆ. ಈ ಬಗ್ಗೆ ಗಮನ ಹರಿಸಿ ಮುಂದಿನ ದಿನಗಳಲ್ಲಿ ಜಾರಿ ಗೊಳಿಸಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
ಪೇಜಾವರ ಮಠದ ಶ್ರೀರಾಮವಿಠಲ ಸಭಾಂಗಣದಲ್ಲಿ ಇಂದು ಕರಾವಳಿಯ ಸಾಧು ಸಂತರು, ಜೆ.ಪಿ.ನಡ್ಡಾ ಜೊತೆ ನಡೆಸಿದ ಸಮಾಲೋಚನಾ ಸಭೆಯ ಬಳಿಕ ಅವರು ಮಾಧ್ಯಮದವರಿಗೆ ವಿವರ ನೀಡಿದರು. ಉಗ್ರವಾದಿ ಚಟುವಟಿಕೆಗಳನ್ನು ಮಟ್ಟಹಾಕಲು ಕರಾವಳಿ ಮಲೆನಾಡು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ರಾಷ್ಟ್ರೀಯ ತನಿಖಾ ದಳದ ವಿಭಾಗವನ್ನು ಶೀಘ್ರ ಆರಂಭಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ದೇವಳಗಳ ನಿರ್ವಹಣೆಯನ್ನು ಸರಕಾರ ನಡೆಸದೆ ಹಿಂದುಗಳಿಗೆ ವಹಿಸಿಕೊಡ ಬೇಕು.
ಗೋ ಹತ್ಯಾ ನಿಷೇಧ ಕಾನೂನು ಸಮರ್ಪಕ ಜಾರಿಯ ಜೊತೆಗೆ ಗೋ ಸಂರಕ್ಷಣೆಗೆ ಪೂರಕ ಯೋಜನೆಗಳಿಗೆ ನೆರವು ನೀಡಬೇಕು. ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ ನೀಡಬೇಕು. ದೇವಸ್ಥಾನಗಳ ಭೂಮಿ ಅತಿಕ್ರಮಣ ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂಬ ಬೇಡಿಕೆಗಳನ್ನು ಅವರ ಮುಂದೆ ಇಟ್ಟಿದ್ದೇವೆ ಎಂದು ಪೇಜಾವರ ಸ್ವಾಮೀಜಿ ತಿಳಿಸಿದರು.
ಸಭೆಯಲ್ಲಿ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ, ಕುಕ್ಕೆ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಬೈಲೂರು ಶ್ರೀ ರಾಮಕೃಷ್ಣ ಆಶ್ರಮದ ಶ್ರೀವಿನಾಯಕಾನಂದ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀವಿದ್ಯೇಂದ್ರ ಸ್ವಾಮೀಜಿ, ಮೂಡಬಿದ್ರೆ ಜೈನಮಠದ ಶ್ರೀಸ್ವಸ್ತಿ ಶ್ರೀಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ, ಮಾಣಿಲ ಶ್ರೀಮೋಹನದಾಸ ಸ್ವಾಮೀಜಿ, ಆನೆಗೊಂದಿ ಸರಸ್ವತಿ ಪೀಠದ ಶ್ರೀಕಾಳ ಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ, ಗುರಪುರ ಶ್ರೀ ರಾಜಶೇಖರಾನಂದ ಸ್ವಾಮೀಜಿ ಇದ್ದರು.
ಅದೇ ರೀತಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರಾದ ಎಸ್.ಅಂಗಾರ, ಸುನೀಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw