ಸ್ವಚ್ಚ ಆಡಳಿತ ವಿಧಾನ ಮೈಗೂಡಿಸಿಕೊಳ್ಳಿ: ಅಧಿಕಾರಿಗಳಿಗೆ ಸಚಿವ ಎಂಟಿಬಿ ನಾಗರಾಜು ಸೂಚನೆ

ಬೆಂಗಳೂರು: ಸ್ವಚ್ಛ,ದಕ್ಷ ಮತ್ತು ಪ್ರಾಮಾಣಿಕ ಆಡಳಿತ ವಿಧಾನವನ್ನು ಸರ್ಕಾರಿ ನೌಕರರು ಮೈಗೂಡಿಸಿಕೊಳ್ಳಬೇಕು.ಇದರಿಂದ ಸರ್ಕಾರದ ಆದಾಯ ಹೆಚ್ಚಿ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಲಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಸಿಮ್ಯಾಕ್ ಸಂಸ್ಥೆಯು ಪೌರಾಡಳಿತ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ಉತ್ತಮ ಪದ್ಧತಿಗಳ ದಾಖಲೀಕರಣವನ್ನು ಬಿಡುಗಡೆಗೊಳಿಸಿ ನಂತರ ಪ್ರಶಸ್ತಿ ಪ್ರದಾನ ಮಾಡಿ ಸಚಿವ ಎಂಟಿಬಿ ನಾಗರಾಜು ಮಾತನಾಡಿದರು.
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಿದ್ದೇವೆ.ನೇರ ಪಾವತಿ ಮೂಲಕ ಆಸ್ತಿ ತೆರಿಗೆ ಸಂಗ್ರಹಕ್ಕೆ ಸಿದ್ಧತೆ ನಡೆದಿದೆ ಎಂದು ಸಚಿವರು ತಿಳಿಸಿದರು.
₹3,885 ಕೋಟಿಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಹಲವೆಡೆ ಟೆಂಡರ್ ಪ್ರಕ್ರಿಯೆ ಪೂರ್ಣ ಗೊಂಡು ಕಾಮಗಾರಿಗಳು ಆರಂಭವಾಗಿವೆ.248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 8,691 ಕೋಟಿ ರೂ.ವೆಚ್ಚದಲ್ಲಿ ಕುಡಿಯುವ ನೀರು ಪೂರೈಸುವ ಅಮೃತ್-2.0 ಯೋಜನೆ ಪ್ರಗತಿಯಲ್ಲಿದೆ ಎಂದು ಸಚಿವ ಎಂಟಿಬಿ ನಾಗರಾಜು ತಿಳಿಸಿದರು.
ಇದೇ ಸಂದರ್ಭದಲ್ಲಿ ತ್ಯಾಜ್ಯ ಸಂಸ್ಕರಣೆಗಾಗಿ ಮಂಗಳೂರು ಮಹಾ ನಗರಪಾಲಿಕೆ,ಸಸಿ ನೆಡುವಿಕೆ ಮತ್ತು ಸಂಸ್ಕರಿತ ನೀರಿನ ಸದ್ಭಳಕೆಗಾಗಿ ಕಾರವಾರ ನಗರಸಭೆ ಹಾಗೂ ಹುಬ್ಬಳಿಯ ತೋಳನಕೆರೆ ಪುನರುಜ್ಜೀವನಕ್ಕಾಗಿ ಕೆಯುಐಡಿಎಫ್ ಸಿಗೆ ಸಚಿವರು ಪ್ರಶಸ್ತಿ ಪ್ರದಾನ ಮಾಡಿದರು.
ಸಮಾರಂಭದಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಾಕೇಶ್ ಸಿಂಗ್,ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್,ಬಿಡಬ್ಲ್ಯೂಎಸ್ಎಸ್ ಬಿ ಅಧ್ಯಕ್ಷ ಎನ್. ಜಯರಾಮ್,ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕಿ ಎನ್.ಮಂಜುಶ್ರೀ ಸೇರಿದಂತೆ ರಾಜ್ಯದಾದ್ಯಂತ ಆಗಮಿಸಿದ್ದ ಅಧಿಕಾರಿಗಳು ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw