ಬಿಜೆಪಿಗೆ ಮತ್ತೊಂದು ತಲೆನೋವು: ಟಿಕೆಟ್ ಕೊಡದ್ದಕ್ಕೆ ಬಿಜೆಪಿ ವಿರುದ್ಧ ತೊಡೆತಟ್ಟಿ ನಿಂತ ಹಿಂದೂ ಮುಖಂಡನಿಂದ ಪಕ್ಷೇತರ ಸ್ಪರ್ಧೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಹಿಂದೂ ಸಂಘಟನೆಯ ಮುಖಂಡ ತೊಡೆ ತಟ್ಟಿ ನಿಂತಿದ್ದಾರೆ. ಬಿಜೆಪಿ ಪಕ್ಷದಿಂದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ವಂಚನೆಯಾಗಿರುವ ಹಿನ್ನೆಲೆಯಲ್ಲಿ ಇದೀಗ ಅವರು ಬಿಜೆಪಿಯ ಬಂಡಾಯವಾಗಿ, ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.
ಎಪ್ರಿಲ್ 17ರಂದು ಅವರು ನಾಮಪತ್ರ ಸಲ್ಲಿಕೆ ಮಾಡುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮೊದಲು ದರ್ಬೆಯಿಂದ ತಾಲೂಕು ಆಡಳಿತ ಸೌಧದ ತನಕ ಬೃಹತ್ ಮೆರವಣಿಗೆಯಲ್ಲಿ ತೆರಳಿ ಬಳಿಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎಪ್ರಿಲ್ 17ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, 10 ಗಂಟೆಗೆ ಪುತ್ತೂರಿನ ದರ್ಬೆ ವೃತ್ತದ ಬಳಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತನಕ ಬೃಹತ್ ಮೆರವಣಿಗೆಯಲ್ಲಿ ತೆರಳಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಬಾರಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಅವರ ಅಭಿಮಾನಿ ಬಳಗದಿಂದ ಸಾಮಾಜಿಕ ಜಾಲತಾಣದಲ್ಲಿ ಟ್ವಿಟರ್ ಅಭಿಯಾನ ನಡೆದಿತ್ತು. ʼಈ ಬಾರಿ ಪುತ್ತೂರಿಗೆ ಪುತ್ತಿಲʼ ಎಂಬ ಈ ಅಭಿಯಾನ ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರವನ್ನು ಪಡೆದಿತ್ತು. ಆದರೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪಕ್ಷ ಟಿಕೆಟ್ ನೀಡದೆ ಆಶಾ ತಿಮ್ಮಪ್ಪ ಅವರಿಗೆ ಟಿಕೆಟ್ ನೀಡಿದ ಬಳಿಕ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.
ಬುಧವಾರ ಪುತ್ತೂರಿನ ಕೊಟೇಚಾ ಹಾಲ್‍ನಲ್ಲಿ ಪುತ್ತಿಲ ಅಭಿಮಾನಿಗಳ ಸಭೆ ನಡೆಸಲಾಗಿತ್ತು. ಸಾವಿರಾರು ಮಂದಿ ಸಭೆಯಲ್ಲಿ ಭಾಗವಹಿಸಿದ್ದು, ಪುತ್ತಿಲ ಅವರು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದರು. ಮುಂದಿನ 2 ದಿನಗಳ ಬಳಿಕ ತನ್ನ ನಿಲುವು ತಿಳಿಸುವುದಾಗಿ ಪುತ್ತಿಲ ಈ ಸಂದರ್ಭದಲ್ಲಿ ಸ್ಪಷ್ಟ ಪಡಿಸಿದ್ದರು. ಇದೀಗ ಪುತ್ತಿಲ ಅವರು ಪುತ್ತೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw