ಮಂಗಳೂರು: ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ:  ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ: ಮೇ 10ರ ಮತದಾನ ಕಾರ್ಯಕ್ಕೆ ಸಕಲ ಸಜ್ಜು - Mahanayaka
9:31 PM Thursday 12 - December 2024

ಮಂಗಳೂರು: ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ:  ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ: ಮೇ 10ರ ಮತದಾನ ಕಾರ್ಯಕ್ಕೆ ಸಕಲ ಸಜ್ಜು

election
09/05/2023

ವಿಧಾನಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯ 202 ಮಂಗಳೂರು ಉತ್ತರ, 203 ಮಂಗಳೂರು ದಕ್ಷಿಣ ಹಾಗೂ 204 ಮಂಗಳೂರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ನಗರದ ವಿವಿಧೆಡೆ ಮೇ.9ರ ಮಂಗಳವಾರ ಅಚ್ಚುಕಟ್ಟಾಗಿ ನೆರವೇರಿದ್ದು, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು.

202 ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ಪಾಂಡೇಶ್ವರದ ರೋಸಾರಿಯೋ ಶಾಲೆಯಲ್ಲಿ ನಡೆಯಿತು. ಚುನಾವಣಾಧಿಕಾರಿ ಅಭಿಷೇಕ್ ಅವರು ಸ್ಥಳದಲ್ಲಿಯೇ ಉಪಸ್ಥಿತರಿದ್ದು, ಮಸ್ಟರಿಂಗ್ ಕಾರ್ಯ ಸುಗಮವಾಗಿ ನಡೆಯಲು ವ್ಯವಸ್ಥೆಗೊಳಿಸಿದ್ದರು.

203 ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಮಸ್ಟರಿಂಗ್ ಕಾರ್ಯ ಚುನಾವಣಾಧಿಕಾರಿ ಕೆಂಪೇಗೌಡ ಅವರ ನೇತೃತ್ವದಲ್ಲಿ ಉರ್ವಾದ ಕೆನರಾ ಪ್ರೌಢಶಾಲೆಯ ಆವರಣದಲ್ಲಿ ಅಚ್ಚುಕಟ್ಟಾಗಿ ನೆರವೇರಿತು.
ಇನ್ನು 204 ಮಂಗಳೂರು ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಕಾರ್ಯ ನಗರದ ಕೋಣಾಜೆ ವಿಶ್ವವಿದ್ಯಾಲಯದ ಮಾನವೀಕ ಶಾಸ್ತ್ರ ವಿಭಾಗದ ಆವರಣದಲ್ಲಿ ಅಚ್ಚುಕಟ್ಟಾಗಿ ಜರುಗಿತು.

ಚುನಾವಣಾಧಿಕಾರಿ ರಾಜು ಅವರು ಬೆಳಿಗ್ಗೆಯಿಂದಲೇ ಹಾಜರಿದ್ದು, ಮಸ್ಟರಿಂಗ್ ಕಾರ್ಯ ಪೂರ್ಣಗೊಳ್ಳುವವರೆಗೂ ಮೇಲುಸ್ತುವಾರಿ ವಹಿಸಿದ್ದರು. ಮತಗಟ್ಟೆಗಳಿಗೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಮಸ್ಟರಿಂಗ್ ಕಾರ್ಯ ಜರುಗುವ ಸ್ಥಳದಲ್ಲಿ ಸೇರತೊಡಗಿದರು.

ಇದರ ಜೊತೆಗೆ ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್ ಗಾಗಿ ನಿಯೋಜಿತಗೊಂಡಿರುವ ಪೊಲೀಸರು, ಸಿಆರ್‍ಪಿಎಫ್ ಯೋಧರು, ಗೃಹರಕ್ಷಕದಳದವರು ಕೂಡ ಆಗಮಿಸಿದ್ದರು. ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರು, ಯೋಧರನ್ನು ಕರೆದುಕೊಂಡು ಹೋಗಲು ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆಯಾ ವಿಧಾನಸಭಾ ಕ್ಷೇತ್ರಗಳ ಗ್ರಾಮಗಳಲ್ಲಿನ ಮತಗಟ್ಟೆಗಳತ್ತ ತೆರಳುವಂತಹ ಮಾರ್ಗಗಳನ್ನು ಗುರುತಿಸಿ, ಬಸ್, ಇತರೆ ವಾಹನಗಳನ್ನು ನಿಯೋಜಿಸಲಾಗಿತ್ತು.

ಶಾಲೆ, ವಿಶ್ವವಿದ್ಯಾಲಯದ ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ ಹಾಗೂ ಬಸ್ ಗಳ ವಿವರವನ್ನು ತಿಳಿಸುವ ವ್ಯವಸ್ಥೆ ಮಾಡಲಾಗಿತ್ತು. ಇನ್ನೊಂದೆಡೆ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್ ಬ್ಯಾಗ್ ಅನ್ನು ವಿತರಿಸಲು ಕೌಂಟರ್‍ಗಳನ್ನು ಸ್ಥಾಪಿಸಿ, ಆ ಮೂಲಕ ಸಂಬಂಧಪಟ್ಟ ಮತಗಟ್ಟೆಗಳ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲಾಯಿತು. ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು.

ಅಚ್ಚುಕಟ್ಟಾದ ವ್ಯವಸ್ಥೆ: ನಗರದ ವಿವಿಧ ಶಾಲೆಗಳು ಹಾಗೂ ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಲಾದ ಮಸ್ಟರಿಂಗ್ ಕಾರ್ಯ ಯಶಸ್ವಿಯಾಗಿ, ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ನೆರವೇರಿಸಲು ಪೂರ್ವಭಾವಿಯಾಗಿ ಯೋಜನೆ ರೂಪಿಸಿ, ಅದರಂತೆಯೇ ಕಾರ್ಯಗತಗೊಳಿಸಲಾಯಿತು.

ಚುನಾವಣಾ ಸಾಮಗ್ರಿ ವಿತರಣೆ, ಮತಯಂತ್ರಗಳ ವಿತರಣೆ, ಚುನಾವಣೆಗೆ ಮತಗಟ್ಟೆಗಳಿಗೆ ನಿಯೋಜನೆ, ಚುನಾವಣಾ ಕರ್ತವ್ಯಕ್ಕೆ ತೆರಳಲು ಆಗಮಿಸಿದ್ದ ಅಧಿಕಾರಿ, ಸಿಬ್ಬಂದಿಗಳಿಗೆ ಕಾಲೇಜು ಆವರಣದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಉಟೋಪಹಾರದ ವ್ಯವಸ್ಥೆ ಕೈಗೊಳ್ಳಲಾಯಿತು.

ಮತಗಟ್ಟೆಗಳತ್ತ ತೆರಳುವ ಮುನ್ನ ಮಧ್ಯಾಹ್ನದ ಊಟ ಪೂರೈಸಿಕೊಂಡು ಹೋಗುವ ರೀತಿ ವ್ಯವಸ್ಥೆ ಮಾಡಲಾಯಿತು. ಮಧ್ಯಾಹ್ನದ ಊಟ ಸವಿದ ಅಧಿಕಾರಿ, ಸಿಬ್ಬಂದಿಗಳು, ತಮಗೆ ನಿಯೋಜಿಸಲಾದ ಮತಗಟ್ಟೆಗಳಿಗೆ ಆಯಾ ಮಾರ್ಗದ ವಾಹನಗಳ ಮೂಲಕ ತೆರಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ