ಅಧಿಕಪ್ರಸಂಗಿತನದ ಹೇಳಿಕೆ ಬೇಡ | ನಮ್ಮ ಸಜ್ಜನಿಕೆ ದೌರ್ಬಲ್ಯವಲ್ಲ: ಉದ್ದವ್ ಠಾಕ್ರೆಗೆ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು: ನಮ್ಮ ಬೆಳಗಾವಿಯ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ನೀಡಿರುವ ಅಧಿಕಪ್ರಸಂಗಿತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ಸರಣಿ ಟ್ವೀಟ್ ಮಾಡಿದ್ದಾರೆ.
ಬೆಳಗಾವಿ ಗಡಿಯ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ನೀವು ಈಗ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಕಠುವಾಖ್ಯದಲ್ಲಿ ಉದ್ದವ್ ಠಾಕ್ರೆ ಅವರ ಹೇಳಿಕೆಯನ್ನು ಸಿದ್ದರಾಮಯ್ಯ ಖಂಡಿಸಿದರು.
ಕರ್ನಾಟಕ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಸಿಎಂ ಅವರ ಅಧಿಕಪ್ರಸಂಗಿತನದ ಉದ್ದಟತನದ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಅವರು ಸಿದ್ದರಾಮಯ್ಯ ಹೇಳಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಯವರೇ, ಕನ್ನಡಿಗರು ಶಾಂತಿ ಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆಯಿಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.