ಸ್ವಾತಂತ್ರ್ಯ ಹೋರಾಟಗಾರ ಬಿ.ವಿ.ಕಕ್ಕಿಲ್ಲಾಯ ಕುರಿತ ಉಪನ್ಯಾಸ ಕಾರ್ಯಕ್ರಮದ ವಿರುದ್ಧ ಎಬಿವಿಪಿ ಪ್ರತಿಭಟನೆ
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿ.ವಿ.ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಇಂದು ಆಯೋಜಿಸಲ್ಪಟ್ಟ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸಿದ ಘಟನೆ ನಡೆಯಿತು.
ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣ ಚಳುವಳಿಯ ನಾಯಕ, ಸಿಪಿಐ ಹಾಗೂ ಎಐಟಿಯುಸಿ ನಾಯಕರು, ರಾಜ್ಯಸಭೆ ಹಾಗೂ ವಿಧಾನಸಭೆಯ ಸದಸ್ಯ, ಚಿಂತಕ, ಲೇಖಕ ಬಿ.ವಿ.ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮವು ಇಂದು ಬೆಳಗ್ಗೆ ಮಂಗಳೂರು ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದೆ. ಈಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲಿರುವ ದೆಹಲಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಡಾ. ಶಂಸುಲ್ ಇಸ್ಲಾಂ ಆಗಮನಕ್ಕೆ ಎಬಿವಿಪಿ ತೀವ್ರ ವಿರೋಧ ವ್ಯಕ್ತಪಡಿಸಿತು.
ವಿರೋಧದ ನಡುವೆಯೂ ಬಿ.ವಿ. ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡಲಾಗಿದೆ ಎಂದು ಆರೋಪಿಸಿದ ಎಬಿವಿಪಿ ಪ್ರತಿಭಟನೆ ನಡೆಸಿತ್ತು. ಉಪನ್ಯಾಸ ಕಾರ್ಯಕ್ರಮಕ್ಕೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಲೇಜು ಆವರಣದಲ್ಲಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.