ಧರ್ಮಸ್ಥಳ: ಅಕ್ರಮ ಮರಳು ದಾಸ್ತಾನು, ಮಾರಾಟ: ಕ್ರಮಕ್ಕೆ ಮುಂದಾದ ಪೊಲೀಸರು
16/09/2023
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು ಎಂಬಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿದ್ದಾರೆ.
ಬಂದಾರು ಗ್ರಾಮ ಪಂಚಾಯತ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ದೂರು ನೀಡಿದ್ದು, ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಸಂದೇಶ್ ಎಂಬುವವರ ವಿರುದ್ದ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು.
ಅದರಂತೆ ಇದೀಗ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಲ್ಲಿ ಸುಮಾರು 48 ಟನ್ ನಷ್ಟು ಮರಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇಲ್ಲಿ ಕಳೆದ ಎರಡು ವರ್ಷಗಳಿಂದ ದೊಡ್ಡ ಪ್ರಮಾಣದಲ್ಲಿ ಅಕ್ರಮ ಮರಳು ಶೇಖರಣೆ ಮಾಡಿ ವ್ಯವಹಾರ ನಡೆಸಲಾಗುತ್ತಿತ್ತು ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂದಿತ್ತು. ಇದೀಗ ಕಂದಾಯ ಇಲಾಖೆ ಹಾಗೂ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.