ಹಾಲಶ್ರೀ ಸ್ವಾಮೀಜಿ ಅರೆಸ್ಟ್: ಓರಿಸ್ಸಾದ ಕಟಕ್ ಬಳಿ ರೈಲಿನಲ್ಲಿ ಸಿಕ್ಕಿಬಿದ್ದ ಶ್ರೀಗಳು!
ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿ ಬಂಧನವಾಗಿದೆ.
ಬೈಂದೂರಿನ ಉದ್ಯಮಿಗೆ ಬಿಜೆಪಿಯಿಂದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಗ್ಯಾಂಗ್ನ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಒಡಿಶಾದಲ್ಲಿ ಬಂಧಿಸಲಾಗಿದೆ.
ಈ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಹಾಲಶ್ರೀ ಸ್ವಾಮೀಜಿ ಬಂಧನ ಭೀತಿಯಿಂದ ತಲೆಮರೆಸಿಕೊಂಡು, ನಿರೀಕ್ಷಣಾ ಜಾಮೀನು ಪ್ರಯತ್ನಿಸಿದ್ದರಾದರೂ ನ್ಯಾಯಾಲಯವು ಅವರ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್ ಮುಂದೂಡಿದೆ.
ಕಳೆದ ವಾರ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆಯಾಗಿದ್ದರು. ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಲಶ್ರೀ ಸ್ವಾಮೀಜಿ ಇಂದು ಓರಿಸ್ಸಾದ ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್ಗಾಯಾಗೆ ತೆರಳುತ್ತಿದ್ದಾಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ ಎನ್ನಲಾಗಿದೆ.