ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆ: ಪ್ರಮಾಣವಚನ ಸ್ವೀಕರಿಸಿದ ಮುಹಮ್ಮದ್ ಯೂನುಸ್; 17 ಮಂದಿಯ ತಂಡ ರಚನೆ
ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ರಚನೆಯಾಗಿದ್ದು, ಹದಿನೇಳು ಮಂದಿ ಸದಸ್ಯರು ಢಾಕಾದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನುಸ್ (84) ಅವರು ದೇಶದ ಮುಖ್ಯ ಸಲಹೆಗಾರರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಅಶಾಂತಿಯ ಮಧ್ಯೆ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶವನ್ನು ತೊರೆದ ನಂತರ ಈ ಬೆಳವಣಿಗೆ ನಡೆದಿದೆ. ಢಾಕಾದ ಅಧ್ಯಕ್ಷೀಯ ಅರಮನೆಯಲ್ಲಿ ವಿದೇಶಿ ರಾಜತಾಂತ್ರಿಕರು, ನಾಗರಿಕ ಸಮಾಜದ ಸದಸ್ಯರು, ಉನ್ನತ ಉದ್ಯಮಿಗಳು ಮತ್ತು ಮಾಜಿ ವಿರೋಧ ಪಕ್ಷದ ಸದಸ್ಯರು ಭಾಗವಹಿಸಿದ್ದ ಸಮಾರಂಭದಲ್ಲಿ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಯೂನುಸ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕುತೂಹಲಕಾರಿ ಸಂಗತಿಯೆಂದರೆ, ಶೇಖ್ ಹಸೀನಾ ಅವರ ಪಕ್ಷವಾದ ಅವಾಮಿ ಲೀಗ್ ನ ಯಾವುದೇ ಪ್ರತಿನಿಧಿಗಳು ಹಾಜರಿರಲಿಲ್ಲ.
ಮಧ್ಯಂತರ ಸರ್ಕಾರವು ರಾಷ್ಟ್ರವನ್ನು ಪ್ರಜಾಪ್ರಭುತ್ವದ ಭವಿಷ್ಯದತ್ತ ಕೊಂಡೊಯ್ಯುತ್ತದೆ ಎಂದು ಯುನೈಟೆಡ್ ಸ್ಟೇಟ್ಸ್ ಭರವಸೆ ವ್ಯಕ್ತಪಡಿಸಿದೆ. ಯುಎಸ್ ಸ್ಟೇಟ್ ಡಿಪಾರ್ಟ್ ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಯುಎಸ್ ಮಧ್ಯಂತರ ಸರ್ಕಾರದೊಂದಿಗೆ ಸಂವಹನ ನಡೆಸುತ್ತಿದೆ ಎಂದು ಹೇಳಿದ್ದಾರೆ. “ಇಂದು ಯೂನುಸ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಮ್ಮ ಉಸ್ತುವಾರಿ ಅಧಿಕಾರಿಗಳು ಭಾಗವಹಿಸಿದ್ದರು. ಮಧ್ಯಂತರ ಸರ್ಕಾರವು ಬಾಂಗ್ಲಾದೇಶದ ಜನರಿಗೆ ಪ್ರಜಾಪ್ರಭುತ್ವದ ಭವಿಷ್ಯವನ್ನು ರೂಪಿಸುವುದನ್ನು ನೋಡಲು ನಾವು ಬಯಸುತ್ತೇವೆ ಎಂದು ನಾವು ಸ್ಪಷ್ಟಪಡಿಸಿದ್ದೇವೆ” ಎಂದು ಮಿಲ್ಲರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth