ಹೈಕೋರ್ಟ್ ನ ತೀರ್ಪನ್ನು ಗೌರವಿಸಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ - Mahanayaka

ಹೈಕೋರ್ಟ್ ನ ತೀರ್ಪನ್ನು ಗೌರವಿಸಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

vijayendra
24/09/2024

ಬೆಂಗಳೂರು: ಹೈಕೋರ್ಟ್ ನ ತೀರ್ಪನ್ನು ಗೌರವಿಸಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.

ಬಿಜೆಪಿಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ಮಾನ್ಯ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್ ತಿಳಿಸಿದೆ ಎಂದರು.

ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಿರಂತರ ಹೋರಾಟ ನಡೆಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡಿದ್ದೆವು. ನಂತರ ಸ್ವತಃ ಸಿಎಂ ಕುಟುಂಬವೇ ಫಲಾನುಭವಿಗಳಾಗಿರುವ ಮೈಸೂರಿನ ಮುಡಾ ಹಗರಣ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದೆವು. ಬೆಂಗಳೂರು- ಮೈಸೂರು ಪಾದಯಾತ್ರೆಯನ್ನು ನಡೆಸಿ ಬಿಜೆಪಿ- ಜೆಡಿಎಸ್ ಒಟ್ಟಾಗಿ ಯಶಸ್ವಿ ಹೋರಾಟ ಮಾಡಿದ್ದಾಗಿ ಅವರು ತಿಳಿಸಿದರು.

ಮುಡಾ ವಿಚಾರದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಬಳಿಕ ರಾಜಭವನ, ರಾಜ್ಯಪಾಲರ ವಿರುದ್ಧ ತೇಜೋವಧೆ ಮಾಡಿದ್ದರು. ಈಗ ಹೈಕೋರ್ಟ್ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಆದ್ದರಿಂದ ಸಿಎಂ ರಾಜೀನಾಮೆ ಕೊಡಲೇಬೇಕು ಎಂದು ಅವರು ಆಗ್ರಹಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ