ಮುಂದುವರಿದ ಬಾಣಂತಿಯರ ಮರಣ: ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ!
ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಟಬಾಗಿ ಮೃತ ಮಹಿಳೆಯಾಗಿದ್ದಾರೆ. ಶುಕ್ರವಾರ ಹೆರಿಗೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಹೆರಿಗೆ ವಾರ್ಡ್‍ನಲ್ಲಿ ವೈಶಾಲಿ ದಾಖಲಾಗಿದ್ದರು. ಶನಿವಾರ ಬೆಳಗ್ಗೆ ಸಿಜೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಭಾನುವಾರ ಬೆಳಗ್ಗೆಯವರೆಗೂ ಹುಷಾರಾಗಿದ್ದರು. ಆದರೆ, ಇದ್ದಕ್ಕಿದ್ದಂತೆ ಎದೆನೋವು ಎಂದು ಹೇಳಲು ಶುರು ಮಾಡಿದ್ದರು.
ಬೆಳಗ್ಗೆ 10.30ರವರೆಗೂ ಯಾವೊಬ್ಬ ವೈದ್ಯರೂ ಆಸ್ಪತ್ರೆಗೆ ಬಾರದೇ , ನಿರ್ಲಕ್ಷ್ಯ ವಹಿಸಿದ್ದರು ಎಂದು ಮೃತ ವೈಶಾಲಿ ಅವರ ಅತ್ತೆ ಈರವ್ವ ದೂರಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಆಸ್ಪತ್ರೆ ಸಮಸ್ಯೆ ಬಗೆ ಹರಿಸಲು ಸರ್ಕಾರ ಕೇವಲ ಸೂಚನೆ ನೀಡುತ್ತಿದೆ. ಆದರೆ, ಯಾವುದೇ ಬದಲಾವಣೆಗಾಳಾಗುತ್ತಿಲ್ಲ. ಬಾಣಂತಿಯರ ಮರಣ ನಿಲ್ಲುತ್ತಿಲ್ಲ ಎಂಬ ಆಕ್ರೋಶ ಕೇಳಿ ಬಂದಿದೆ.
ವೈಶಾಲಿಯ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆದರೆ ಕುಟುಂಬಸ್ಥರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಮ್ಸ್ ನಲ್ಲಿ ಮರಣೋತ್ತರ ಪರೀಕ್ಷೆ ಮಾಡಬಾರದು ನಮಗೆ ವೈದ್ಯರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಬೇರೆ ಯಾವುದಾದರೂ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಘಟನೆ ಹಿನ್ನೆಲೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎರಡು ದಿನಗಳ ಹಿಂದೆಯಷ್ಟೇ ಮೃತ ವೈಶಾಲಿ ಪತಿಯ ಜೊತೆ ಸಂಭ್ರಮದಿಂದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಇದೀಗ ಇದ್ದಕ್ಕಿದ್ದಂತೆ ಸಾವನ್ನಪ್ಪಿನ್ನಪ್ಪಿರುವುದು ಕುಟುಂಬಕ್ಕೆ ಆಘಾತ ತಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: