ಬಸ್ ಡಿಕ್ಕಿ ಹೊಡೆದು ಆರೆಸ್ಸೆಸ್ ಮುಖಂಡ ಸ್ಥಳದಲ್ಲಿಯೇ ಸಾವು
24/01/2021
ಬೀದರ್: ಬಸ್ ಡಿಕ್ಕಿ ಹೊಡೆದ ಪರಿಣಾಮ ಆರೆಸ್ಸೆಸ್ ನ ಹಿರಿಯ ಮುಖಂಡ ಸುಧಾಕರ ದೇಶಪಾಂಡೆ ಸಾವನ್ನಪ್ಪಿದ್ದು, ಜೊತೆಗಿದ್ದ ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲೆಯ ಭಾಲ್ಕಿ ತಾಲೂಕಿನ ಭಾತಂಬ್ರಾ ರಸ್ತೆಯಲ್ಲಿ ರವಿವಾರ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ಸೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಲವು ಕಾರ್ಯಕ್ರಮಗಳಲ್ಲಿ ಸುಧಾಕರ ದೇಶಪಾಂಡೆ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಘಟನೆ ಸಂಬಂಧ ಭಾಲ್ಕಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇಶಪಾಂಡೆ ಅವರ ನಿಧನಕ್ಕೆ ವಿವಿಧ ಹಿಂದೂ ಪರ ಸಂಘಟನೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.