ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಹಬ್ಬ ಆಚರಣೆ
ರಂಝಾನ್ ಉಪವಾಸ ವ್ರತಾಚರಣೆಯನ್ನು ಮುಗಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಹಬ್ಬವನ್ನು ಆಚರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು.
ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಉಪವಾಸಿಗರು ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ, ವಿಶಿಷ್ಟ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಸಂಭ್ರಮಿಸಿದರು. ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್‌ಗಾಗಿ ಪ್ರಾರ್ಥಿಸಿದರು. ಹಾಗೇ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ಕೋರಿದರು.
ಜಿಲ್ಲೆಯ ಬಹುತೇಕ ಎಲ್ಲಾ ಮಸೀದಿ-ಈದ್ಗಾಗಳಲ್ಲಿ ವಿಶೇಷ ನಮಾಝ್, ಪ್ರವಚನ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಹಾಗೂ ಮನೆಗಳಲ್ಲಿ ಹಬ್ಬದ ಸಂಭ್ರಮ ಕಂಡು ಬಂತು. ಮಂಗಳೂರು ನಗರದ ಬಾವುಟಗುಡ್ಡದ ಈದ್ಗಾ ಜುಮಾ ಮಸ್ಜಿದ್‌ನಲ್ಲಿ ಬಂದರ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಖತೀಬ್ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ನೇತೃತ್ವದಲ್ಲಿ ಮತ್ತು ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್‌ನಲ್ಲಿ ಖತೀಬ್ ಇಬ್ರಾಹೀಂ ಸಅದಿ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಹೀಗೆ ಸರಳವಾಗಿ ಮುಸ್ಲಿಂ ಬಾಂಧವರು ರಂಝಾನ್ ಹಬ್ಬವ ಆಚರಿಸಿದ್ರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw