ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹೀನಾಯವಾಗಿ ಸೋಲಲಿದೆ | ಯಡಿಯೂರಪ್ಪ
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮಂಗಳೂರಿಗೆ ತಲುಪಿದ್ದು, ಗುರುವಾರ ನಡೆಯಲಿರುವ ರಾಜ್ಯಕಾರ್ಯಕಾರಣಿ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಅವರು ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಸಂಜೆ ಆಗಮಿಸಿದರು.
ಇದೇ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾಗಲಿದ್ದು, ಬಿಜೆಪಿ ಎರಡೂ ಕಡೆಗಳಲ್ಲಿಯೂ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ಕಾರ್ಯಕಾರಣಿ ಸಭೆ ಹಿನ್ನೆಯಲ್ಲಿ ಮುಖ್ಯಮಂತ್ರಿಗಳು ಇಂದು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ತಂಗಲಿದ್ದಾರೆ. ಗುರುವಾರ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯು ಮಂಗಳೂರಿನ ಟಿ.ವಿ.ರಮಣಪೈ ಸಭಾಂಗಣದಲ್ಲಿ ನಡೆಯಲಿದೆ.
ಇಂದು ಸಿಎಂ ಜೊತೆಗೆ, ಡಿಸಿಎಂ ಗೋವಿಂದ ಕಾರಜೋಳ, ಸಚಿವ ಆರ್.ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್, ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ್ ಮತ್ತಿತರ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.