ರಾಜ್ಯದಲ್ಲಿ ಯಾರಿಗೂ ಕೊರೊನಾ ಲಸಿಕೆ ಅಡ್ಡ ಪರಿಣಾಮ ಬೀರಿಲ್ಲ | ಸಚಿವ ಡಾ.ಸುಧಾಕರ್
17/01/2021
ಬೆಂಗಳೂರು: ಕೊರೊನ ಲಸಿಕೆಯಿಂದ ರಾಜ್ಯದಲ್ಲಿ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ. ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನ ಪರಿಶೀಲಿಸಿ ಮಾತನಾಡಿದ ಅವರು, ಜನರು ಲಸಿಕೆಯ ಮೇಲೆ ವಿಶ್ವಾಸವಿಡಬೇಕು. ಲಸಿಕೆ ಪಡೆದರೂ, ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎರಡನೇ ಡೋಸ್ ಪಡೆದ 10 ದಿನಗಳ ಬಳಿಕ ರೋಗ ನಿರೋಧಕ ಶಕ್ತಿ ಬರುತ್ತದೆ ಅಲ್ಲಿಯವರೆಗೆ ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಅವರು ತಿಳಿಸಿದರು.
ಮಣಿಪಾಲ್ ಆಸ್ಪತ್ರೆಯಲ್ಲಿ 4,200 ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಚುನಾವಣೆಯಲ್ಲಿ ಮಾಡುವಂತೆ ಬೂತ್ ಗಳನ್ನು ರೂಪಿಸಿ ವ್ಯವಸ್ಥಿತವಾಗಿ ಲಸಿಕೆ ನೀಡಲಾಗುತ್ತಿದೆ. ಶೇ.70ರಷ್ಟು ಮಂದಿಗೆ ಲಸಿಕೆ ನೀಡಲು ಸಾಧ್ಯವಿದೆ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ ಎಂದು ಅವರು ಹೇಳಿದರು.