ಮಲ ಹೊರುವ ಪದ್ದತಿ, ಜೀತ ಪದ್ದತಿಗಳ ನಿವಾರಣೆಗೆ ದಿಟ್ಟ ಹೆಜ್ಜೆ ಇಟ್ಟವರು ಡಿ.ದೇವರಾಜ ಅರಸು: ಸಚಿವ ಎಸ್.ಅಂಗಾರ
ಉಡುಪಿ: ಬಡವರ ಕಲ್ಯಾಣ ಅಭಿವೃದ್ಧಿ ಯೋಜನೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದರೊಂದಿಗೆ ಸಮಾಜದ ಹಿಂದುಳಿದ ವರ್ಗದವರ ಶ್ರೇಯೋಭಿವೃದ್ಧಿಗೆ ಡಿ.ದೇವರಾಜ ಅರಸು ಅವರ ಕೊಡುಗೆ ಅಪಾರವಾದುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರಹೇಳಿದರು.
ಅವರು ಇಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಡಿ.ದೇವರಾಜ ಅರಸುರವರ 107 ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಶ್ರೀ ಡಿ. ದೇವರಾಜ ಅರಸು ಪ್ರಶಸ್ತಿ ಪ್ರಧಾನ ಸಮಾರಂಭ, ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರ ಜಾರಿಗೆ ತಂದ ಭೂ ಸುಧಾರಣೆ ಕಾಯಿದೆಯನ್ನು ರಾಜ್ಯಾದ್ಯಂತ ಸಮರ್ಪಕ ಜಾರಿಗೆ ತರುವುದರೊಂದಿಗೆ ಬಡ ಜನರು ಸಹ ಜಮೀನುಗಳ ಮಾಲೀಕರಾಗುವುದರೊಂದಿಗೆ ಆರ್ಥಿಕವಾಗಿ ಅಭಿವೃಧ್ದಿಯಾಗಿ ಸ್ವಾವಲಂಬಿಗಳಾಗಲು ಸಹಕಾರವಾಯಿತು ಎಂದರು. ಸಮಾಜದಲ್ಲಿದ್ದ ಅತ್ಯಂತ ಅನಿಷ್ಠ ಪದ್ದತಿಗಳಾದ ಮಲ ಹೊರುವ ಪದ್ದತಿ ಹಾಗೂ ಜೀತ ಪದ್ದತಿಗಳ ನಿವಾರಣೆಗೆ ಸೂಕ್ತ ಕಾನೂನು ರಚಿಸುವುದರೊಂದಿಗೆ ಅವುಗಳನ್ನು ರಾಜ್ಯದಲ್ಲಿ ನಿರ್ಮೂಲನೆ ಗೊಳಿಸಲು ದಿಟ್ಟ ಹೆಜ್ಜೆ ಇಟ್ವವರು ಡಿ.ದೇವರಾಜ ಅರಸು ಅವರು ಎಂದರು.
ಕನಿಷ್ಠ ವೇತನ ಪದ್ದತಿ, ಹಿಂದುಳಿದ ವರ್ಗದವರಿಗೆ ಸರಕಾರಿ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸುವುದರೊಂದಿಗೆ ಹಿಂದುಳಿದ ಸಮಾಜವನ್ನು ಮುಂದೆ ತರಲು ಶ್ರಮಿಸಿದರು .ಇದರಿಂದಾಗಿ ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗಳು ಮುಖ್ಯವಾಹಿನಿಗೆ ಬರಲು ಸಾಧ್ಯವಾಯಿತು ಎಂದರು.
ಬಡ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು ಎಂದು ವಿದ್ಯಾರ್ಥಿ ನಿಲಯಗಳನ್ನು ಅವರ ಅಧಿಕರದವಧಿಯಲ್ಲಿ ನೂತನವಾಗಿ ತೆರೆಯುವುದರೊಂದಗೆ ಎಲ್ಲರೂ ಶಿಕ್ಷಣವಂತರಾಗಬೇಕೆಂದು ಅಭಿಲಾಷೆಯನ್ನು ಹೊಂದಿದ್ದರು ಎಂದರು. ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲೆಯ ವಿವಿಧ ಕರಕುಶಲ ಕರ್ಮಿಗಳಿಂದ ತಯಾರಿಸಿದ ವಸ್ತುಗಳ ಮಾರಾಟ ಮತ್ತು ವಸ್ತುಪ್ರದರ್ಶನ ಹಾಗೂ ವಿವಿಧ ಇಲಾಖೆಗಳ ಸವಲತ್ತುಗಳ ಮಳಿಗೆಗಳನ್ನು ಉದ್ಘಾಟಿಸಲಾಗಿದ್ದು, ಸಾರ್ವಜನಿಕರು 3 ದಿನಗಳ ಕಾಲ ಈ ಮಳಿಗೆಗಳಿಗೆ ಭೇಟಿ ನೀಡಬಹುದಾಗಿದೆ.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ವಿದ್ಯಾರ್ಥಿಗಳು ದೇವರಾಜು ಅರಸು ಅವರು ನೀಡಿರುವ ಯೋಜನೆಗಳ ಸದುಪಯೋಗಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಮಟ್ಟದ ದೇವರಾಜ ಅರಸು ಪ್ರಶಸ್ತಿ ವಿಜೇತರಾದ ಮಲ್ಪೆ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು. ಉಡುಪಿ ಶಾಸಕ ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿ.ದೇವರಾಜ ಅರಸು ಅವರ ಕುರಿತು ಡಾ.ದಿನೇಶ್ ಹೆಗ್ಡೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃಧ್ದಿ ಪ್ರಾದಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಪಂ ಸಿಇಓ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ , ಜಿಲ್ಲಾ ಮಟ್ಟದ ದೇವರಾಜ ಅರಸು ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾದ ವಿಜಯ ಕುಮಾರ್ ಕೊಡವೂರು, ಆರೂರು ತಿಮ್ಮಪ್ಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka