ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾಕಾರರು ಪೊಲೀಸ್ ಕಾರು ಬಳಸಿದರೇ?: ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಹೇಳಿದ್ದೇನು?

ಮಂಗಳೂರು: ಮಂಗಳೂರಿನಲ್ಲಿ ವಕ್ಸ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭ ಪೊಲೀಸ್ ಅಧಿಕಾರಿಯ ಸರಕಾರಿ ಕಾರನ್ನು ಪ್ರತಿಭಟನಾಕಾರರು ಬಳಸಿರುವುದಾಗಿ ಹರಡಿರುವ ವದಂತಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸ್ಪಷ್ಟನೆ ನೀಡಿದ್ದಾರೆ.
ಅಡ್ಯಾರ್ ಕಣ್ಣೂರು ಬಳಿಯ ಶಾ ಗಾರ್ಡನ್ ಮೈದಾನದಲ್ಲಿ ಶುಕ್ರವಾರ ನಡೆದ ವಕ್ಸ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ನಡೆದಿತ್ತು. ಈ ಸಂದರ್ಭದಲ್ಲಿ ಸರಕಾರಿ ಕಾರನ್ನು ಪ್ರತಿಭಟನಾಕಾರರು ಬಳಕೆ ಮಾಡಿದ್ದಾರೆ ಅಂತ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡಿವೆ. ಆದರೆ, ಸರಕಾರಿ ಕಾರನ್ನು ಪ್ರತಿಭಟನಾಕಾರರು ಬಳಸಿಲ್ಲ ಎಂದು ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
ಪ್ರತಿಭಟನೆ ಮುಗಿದ ಬಳಿಕ ಟೆಂಪೋ ಟ್ರಾವೆಲರ್ ವಾಹನವೊಂದು ಚಾಲಕನ ಅಜಾಗರೂಕತೆಯ ಚಾಲನೆ ಕಾರಣ 16 ವರ್ಷ ಬಾಲಕನೋರ್ವನಿಗೆ ಡಿಕ್ಕಿ ಹೊಡೆದು ಕಾಲಿಗೆ ಗಾಯವಾಗಿತ್ತು. ಈ ಸಂದರ್ಭ ಅಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಗಾಯಾಳುವಿನ ಕಡೆಯವರು ಎಸಿಪಿಯವರ ಕಾರನ್ನು ನಿಲ್ಲಿಸಿ, ಗಾಯಾಳುವನ್ನು ಚಿಕಿತ್ಸೆಗಾಗಿ ಎಸಿಪಿಯವರಿದ್ದ ಕಾರಿನಲ್ಲಿ ಕಳುಹಿಸಿದ್ದಾರೆ. ಗಾಯಾಳುವನ್ನು ಅಡ್ಯಾರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಟೆಂಪೋ ಟ್ರಾವೆಲರ್ ವಶಕ್ಕೆ ಪಡೆದು, ಚಾಲಕನನ್ನು ಠಾಣೆಗೆ ಕಳುಹಿಸಲಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಪಘಾತದಂತಹ ಸಂದರ್ಭಗಳಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಕೊಡಿಸುವುದು ಪೊಲೀಸರ ಕರ್ತವ್ಯ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸ್ಪಷ್ಟನೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: