ರಾಜ್ಯದ ವಸತಿ ಶಾಲೆಗಳಲ್ಲಿ ಪಿಯುಸಿವರೆಗೆ ಶಿಕ್ಷಣ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಸ್ತುತ 6 ನೇ ತರಗತಿಯಿಂದ 10 ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಮೇಲ್ದಜೇಗೇರಿಸಲು ನಿರ್ಧರಿಸಲಾಗಿದ್ದು, ಇದರಿಂದ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ರಾಜ್ಯದ 40,000 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಇಂದು ಕಳತ್ತೂರು ನಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ,ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಮತ್ತು ಗ್ರಾಮ ಪಂಚಾಯತ್ ಕುತ್ಯಾರು ಇವರ ಸಹಯೊಗದೊಂದಿಗೆ , 25 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ 830 ಕ್ಕೂ ಹೆಚ್ಚು ಉಚಿತ ವಸತಿ ಶಾಲೆಗಳಿದ್ದು, ಇದರಲ್ಲಿ 2.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಊಟ , ಸಮವಸ್ತç ವಸತಿ ಸೇರಿದಂತೆ ಎಲ್ಲಾ ಸೌಲಭ್ಯಗಳೊಂದಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಈ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ ಬಾರಿ ಶೇ.99 ಫಲಿತಾಂಶ ದಾಖಲಾಗಿದೆ. ಇಲ್ಲಿ ವಿದ್ಯಾಭ್ಯಾಸ ಮಾಡಿದ 14 ವಿದ್ಯಾರ್ಥಿಗಳು ಐಐಟಿ ಹಾಗೂ 22 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್ ಗೆ ಪ್ರವೇಶ ಪಡೆದಿದ್ದಾರೆ. ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 530 ವಸತಿ ಶಾಲೆಗಳಲ್ಲಿ ಪಿ.ಯು.ಸಿ ವರೆಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದರು.
ಈ ಹಿಂದೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬೋರ್‌ವೆಲ್ ಕರೆಯಲು ಟೆಂಡರ್ ಕರೆಯಲಾಗುತ್ತಿದ್ದು, ಪ್ರಸ್ತುತ ಬೋರ್ ವೆಲ್ ಕೊರೆಯುವ ಮೊತ್ತವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮೆ ಮಾಡುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಇದರಿಂದಾಗಿ ಪಾರದರ್ಶಕತೆಯೊಂದಿಗೆ ಫಲಾನುಭವಿಗೆ ತ್ವರಿತವಾಗಿ ಬೋರ್‌ವೆಲ್ ಸಂಪರ್ಕ ದೊರೆಯುತ್ತಿದೆ. 24000 ನಿರುದ್ಯೋಗಿಗಳಿಗೆ ಸಣ್ಣ ವ್ಯಾಪಾರ ಮಾಡಲು ಅನುಕೂಲವಾಗುವಂತೆ ಸಬ್ಸಿಡಿಯೊಂದಿಗೆ ಕಡಿಮೆ ಸಾಲದಲ್ಲಿ ದ್ವಿಚಕ್ರ ವಾಹನ ನೀಡುವ ಯೋಜನೆ ಆರಂಭಿಸಿದ್ದು, ಕಾಪು ಕ್ಷೇತ್ರದಲ್ಲಿ 150 ಕ್ಕೂ ಅಧಿಕ ಮಂದಿಗೆ ಸೌಲಭ್ಯ ನೀಡಲಾಗುತ್ತಿದ್ದು, ಹಿಂದುಗಳಿದ ವರ್ಗದವರಿಗೆ ಉಚಿತ ಹೊಲಿಗೆ ಯಂತ್ರ ನೀಡುವ ಯೋಜನೆಯಡಿ 95 ಜನಕ್ಕೆ ಸೌಲಭ್ಯ ನೀಡಲಾಗುವುದು ಎಂದರು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಳತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಆಚಾರ್ಯ, ಉಪಾಧ್ಯಕ್ಷ ರಾಜೇಶ್ ಶೆಟ್ಟಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಾಯಕ ಇಂಜಿನಿಯರ್ ರಾಮು, ಕಾಪು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್, ಉಡುಪಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್, ಪತ್ರಾಂಕಿತ ವ್ಯವಸ್ಥಾಪಕ ರೋಶನ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿದರು. ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲ ಉಮಾಕಾಂತ ಗೌಡ ವಂದಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw