ಮಾಜಿ ಶಾಸಕ ಎಸ್.ಬಾಲರಾಜು ಬಿಜೆಪಿಗೆ ಸೇರ್ಪಡೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಸ್.ಬಾಲರಾಜು ಹಾಗೂ ಅವರ ಅಪಾರ ಬೆಂಬಲಿಗರು ಇಂದು ಬಿಜೆಪಿ ಸೇರ್ಪಡೆಯಾದರು.
ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ಬಾಲರಾಜು ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಇದೇ ಸಂದರ್ಭದಲ್ಲಿ ಯಳಂದೂರಿನ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀ ನಾರಾಯಣ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ಬಾಲರಾಜು ಅವರ ಸೇರ್ಪಡೆಯಿಂದ ಚಾಮರಾಜನಗರದಲ್ಲಿ ಬಿಜೆಪಿಗೆ ಬಲ ಬಂದಿದೆ. 1999ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಾಲರಾಜು ಅವರು ಕೇವಲ ನಾಲ್ಕು ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. 2004ರಲ್ಲಿ ಪಕ್ಷೇತರರಾಗಿ ಗೆಲುವು ಕಂಡಿದ್ದರು ಎಂದು ಹೇಳಿದರು.
ಎಸ್.ಬಾಲರಾಜು ಮಾತನಾಡಿ, ಅತ್ಯಂತ ಜನಪ್ರಿಯ ಪ್ರಧಾನ ನರೇಂದ್ರಮೋದಿ ಅವರು ಭಾರತವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತಿದ್ದಾರೆ. ಬಿಜೆಪಿಯಿಂದ ಈ ಹಿಂದೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಕಡಿಮೆ ಅಂತರದಿಂದ ಪರಾಭಗೊಂಡಿದ್ದ ನನಗೆ ಇದೀಗ ಮತ್ತೆ ಪಕ್ಷಕ್ಕೆ ಕೆಲಸ ಮಾಡಲು ಹೆಮ್ಮೆ ಎನಿಸುತ್ತಿದೆ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಈ ಬಾರಿ ಕಾಂಗ್ರೆಸ್ ನೆಲಸಮ: ಬಿ.ಎಸ್.ಯಡಿಯೂರಪ್ಪ
ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ ಎಂದು ಬಿ.ಎಸ್.ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ ಹೇಳಿದರು.
ಬಿಜೆಪಿ 135ರಿಂದ 140 ಸ್ಥಾನಗಳನ್ನು ಗೆದ್ದು, ಅಧಿಕಾರಕ್ಕೆ ಬರುವುದು ನಿಶ್ಚಿತ. ಭಾನುವಾರದಿಂದು ಚುನಾವಣಾ ಪ್ರವಾಸ ಆರಂಭವಾಗಲಿದ್ದು, ಆಗ ಯಾವ ರೀತಿ ಗಾಳಿ ಬೀಸುತ್ತಿದೆ ಎಂದು ಅರ್ಥವಾಗುತ್ತೆ. ನರೇಂದ್ರಮೋದಿ ಅವರು ಪ್ರಚಾರಕ್ಕೆ ಇಳಿದ ನಂತರ 140 ಸ್ಥಾನ ಗೆದ್ದು, ಸರ್ಕಾರ ರಚನೆ ಮಾಡುವುದರಲ್ಲಿ ಸಂಶಯವಿಲ್ಲ. ಪಕ್ಷಕ್ಕೆ ಸೇರಲು ಅನೇಕರು ತಮ್ಮನ್ನು ಭೇಟಿಯಾಗುತ್ತಿದ್ದಾರೆ. ಬಿಜೆಪಿ ತತ್ವ-ಸಿದ್ಧಾಂತ ಒಪ್ಪಿ ಬರುವುದಾದರೆ ಅಂತವರನ್ನು ಸ್ವಾಗತಿಸಲು ಸಿದ್ಧರಾಗಿದ್ದೇವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw