ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ–2023ರ ಅಂಗವಾಗಿ ಮತದಾನದ ಹಬ್ಬ ಕಾರ್ಯಕ್ರಮ

ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲಿ ಹೆಚ್ಚು ಮಂದಿ ಐಟಿ-ಬಿಟಿ ಸೆಕ್ಟಾರ್ ಗಳಲ್ಲಿ ಕೆಲಸ ಮಾಡುತ್ತಿದ್ದರೂ ಕೂಡಾ ಶೇಕಡಾವಾರು ಮತದಾನ ಮಾತ್ರ ಕಡಿಮೆಯಿದ್ದು, ಅದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದರು.
ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ-2023ರ ಅಂಗವಾಗಿ ಚುನಾವಣಾ ಆಯೋಗದ ವತಿಯಿಂದ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ Vote Fest (ಮತದಾನದ ಹಬ್ಬ) ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕಳೆದ 2 ಸಾರ್ವತ್ರಿಕ ಚುನಾವಣೆಗಳನ್ನು ಗಮನಿಸಿದರೆ ಶೇಕಡಾವಾರು ಪ್ರಮಾಣ ಕಡಿಮೆಯಾಗುತ್ತಲೇ ಬರುತ್ತಿದೆ. ಈ ಸಂಬಂಧ ಎಲ್ಲರೂ ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.
ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಮತದಾನ ಮಾಡುವುದು ಆದ್ಯ ಕರ್ತವ್ಯವಾಗಿದ್ದು, ಅವರವರ ಹಕ್ಕನ್ನು ತಪ್ಪದೆ ಚಲಾಯಿಸಬೇಕು. ಅದಕ್ಕಾಗಿ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಐಟಿ-ಬಿಟಿ ಸಂಸ್ಥೆಗಳು, ವಿದ್ಯಾರ್ಥಿಗಳು, ಹೋಟೆಲ್ ಸಂಘಟನೆಗಳು, ಆಸ್ಪತ್ರೆಗಳು, ಯುವ ಮತದಾರರು, ಕಾರ್ಖಾನೆಗಳ ಮುಖ್ಯಸ್ಥರ ಜೊತೆ ಮತದಾನ ದಿನ ಎಲ್ಲರೂ ತಪ್ಪದೆ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಅಂಗವಾಗಿ ಮತದಾನ ಸಂದೇಶವನ್ನು ಪ್ರಚಾರ ಮಾಡಲು ಮತ್ತು ಮತದಾನದ ಹಕ್ಕನ್ನು ಚಲಾಯಿಸುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಚರ್ಚ್ ಸ್ಟ್ರೀಟ್ ನಲ್ಲಿ ಬೈಕ್ ರ‍್ಯಾಲಿ, ಬೀದಿನಾಟಕ, ಯಕ್ಷಗಾನ, ಪ್ಲಾಶ್ ಮಾಬ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಈ ವೇಳೆ ಅಪರ ಮುಖ್ಯ ಚುನಾವಣಾಧಿಕಾರಿಯಾದ ಶ್ರೀ ರಾಜೇಂದ್ರ ಚೋಳನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಪ್ರತಾಪ್ ರೆಡ್ಡಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EOUjVqy3Mmp66N4bRSBoht
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw