ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಹೇಳಿಕೆ: ಟೀಕೆ ಬೆನ್ನಲ್ಲೆ ಸ್ಪಷ್ಟನೆ ನೀಡಿದ ಸಚಿವ ಅಶ್ವತ್ಥ ನಾರಾಯಣ್

ಬೆಂಗಳೂರು: ಚುನಾವಣೆ ಹತ್ತಿರದಲ್ಲಿರುವಾಗಲೇ ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಹೇಳಿರುವ ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಗುರಿಯಾಗಿದೆ.
ಮಂಡ್ಯ ಜಿಲ್ಲೆಯ ಸಾತನೂರು ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ ನಾರಾಯಣ್ ಟಿಪ್ಪು ಸುಲ್ತಾನ್ ಅವರನ್ನು ನಿಂದಿಸುವ ಬರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. “ನಿಮಗೆ ಟಿಪ್ಪು ಬೇಕಾ..? ಸಾವರ್ಕರ್ ಬೇಕಾ..? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಉರಿಗೌಡ ಮತ್ತು ನಂಜೇಗೌಡ ಏನ್ ಮಾಡಿದ್ದರು. ಹಾಗೇಯೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು” ಎಂದು ಹೇಳಿದ್ದರು.
ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ್, ಇದು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ಎಂದಿದ್ದಾರೆ.
ಮಂಡ್ಯದಲ್ಲಿ ಟಿಪ್ಪು -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ” ಎಂದು ಗುರುವಾರ ಟ್ವೀಟ್ ಮಾಡಿದ್ದಾರೆ.
ಮುಂದುವರಿದು, “ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ” ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw