ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ; ತಪ್ಪಿತಸ್ಥರಾದರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಅಂಗಾರ
ಕುಂದಾಪುರ: ಗಂಗೊಳ್ಳಿಯ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಾದರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಎಸ್.ಅಂಗಾರ ಹೇಳಿದರು.
ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿದ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಕಾಮಗಾರಿ ಗುಣಮಟ್ಟದ ಬಗ್ಗೆ ಗುತ್ತಿಗೆದಾರರು ಗಮನಹರಿಸಬೇಕಿದ್ದು, ಕಳಪೆ ಕಾಮಗಾರಿ ನಡೆಸಿದ್ದು ಕಂಡು ಬಂದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದರು.
ಜೆಟ್ಟಿ ಕುಸಿತದಿಂದ ಮೀನುಗಾರಿಕೆಗೆ ತೊಂದರೆಯಾಗದಂತೆ ಆದಷ್ಟು ಶೀಘ್ರ ಜೆಟ್ಟಿ ಪುನರ್ ನಿರ್ಮಾಣ ಮಾಡಲು ಸರಕಾರ ಕ್ರಮಕೈಗೊಳ್ಳಲಿದೆ. ಪುಣೆಯ ಸಿಡಬ್ಲ್ಯುಪಿಆರ್‌ಎಸ್ ಸಂಸ್ಥೆಯ ಬದಲು ಬೆಂಗಳೂರಿನ ಖಾಸಗಿ ಸಂಸ್ಥೆಯ ವಿವಿಧ ಸಂಸ್ಥೆಗಳು ಬೇರೆ ಬೇರೆ ತಾಂತ್ರಿಕತೆ ಬಗ್ಗೆ ವಿನ್ಯಾಸ ನೀಡುತ್ತಿದ್ದು, ವಿನ್ಯಾಸದಲ್ಲಿ ಲೋಪ ಕಂಡು ಬಂದಲ್ಲಿ ಕ್ರಮಕೈಗೊಂಡು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಲು ಸರಕಾರ ಕ್ರಮ ವಹಿಸಲಿದೆ ಎಂದು ಹೇಳಿದರು.
12 ಕೋ. ರೂ. ವೆಚ್ಚದ ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿಯಲ್ಲಿ 10 ಕೋ. ರೂ. ಬಿಡುಗಡೆ ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ಯಾವ ಹಂತದಲ್ಲಿ ಎಷ್ಟೆಷ್ಟು ಹಣ ಬಿಡುಗಡೆ ಮಾಡಿದ್ದಾರೆ ಎಂಬುದರ ಬಗ್ಗೆ ಅಧೀಕೃತ ಮಾಹಿತಿ ಪಡೆದುಕೊಂಡು ಲೋಪವಾಗಿದ್ದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಜೆಟ್ಟಿ ಕುಸಿತವನ್ನು ಲೋಕಾಯುಕ್ತ ತನಿಖೆ ನಡೆಸಬೇಕೆಂಬ ಸ್ಥಳೀಯ ಮೀನುಗಾರರ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸೋಮವಾರ ಈ ಬಗ್ಗೆ ಇಲಾಖೆಯ ಉಮ್ಮತ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಅಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಎಂಜಿನಿಯರ್ ಶ್ರೀನಿವಾಸ ಮೂರ್ತಿ, ಮೀನುಗಾರಿಕೆ ಇಲಾಖೆ ಅಪರ ನಿರ್ದೇಶಕ ಪಿ.ನಾಗರಾಜ್, ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಾದ ಗಣೇಶ, ಉದಯಕುಮಾರ್, ಸುಮಲತಾ, ದಿವಾಕರ ಖಾರ್ವಿ, ಉಪನಿರ್ದೇಶಕ ಕುಮಾರಸ್ವಾಮಿ, ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್ ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka