ಚಾಮರಾಜನಗರದಲ್ಲಿ ಕೇಂದ್ರದ ವಿರುದ್ಧ ಕೈ ಕಹಳೆ
ಚಾಮರಾಜನಗರ: ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ಇಂದು ಚಾಮರಾಜನಗರದಲ್ಲಿ ಕೈ ಕಹಳೆ ಮೊಳಗಿಸಿತು.
ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಸಚಿವ ವೆಂಕಟೇಶ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಎ.ಆರ್.ಕೃಷ್ಣಮೂರ್ತಿ ಸೇರಿದಂತೆ ಮುಖಂಡರು, ಕಾರ್ಯಕರ್ತರು ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಭುವನೇಶ್ವರಿ ವೃತ್ತದಲ್ಲಿ ರಸ್ತೆತಡೆ ನಡೆಸಿದರು.
ಈ ವೇಳೆ ಸಚಿವ ವೆಂಕಟೇಶ್ ಮಾತನಾಡಿ, ಅಕ್ಕಿ ಕೊಡಲು ಮೊದಲು ಒಪ್ಪಿಗೆ ಕೊಟ್ಟಿದ್ದರು. ಬಳಿಕ, ಇದ್ದಕ್ಕಿದ್ದಂತೆ ನಿರಾಕರಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡಲು ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.
ನಾವೇನು ಅಕ್ಕಿಯನ್ನು ಉಚಿತವಾಗಿ ಕೇಳಿಲ್ಲ. ಹಣ ಕೊಡುತ್ತೇವೆ ಕೊಡಿ ಎಂದರೂ ಅಕ್ಕಿ ಕೊಡಲಿಲ್ಲ, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿದೆ ಎಂದು ದುರುದ್ದೇಶದಿಂದ ಅಕ್ಕಿ ಕೊಡಲು ಬಿಜೆಪಿ ಕೇಂದ್ರ ಸರ್ಕಾರ ನಿರಾಕರಿಸಿದೆ. ನಾವೇನು ಅಕ್ಕಿಯನ್ನು ಅಂಬಾನಿ, ಅದಾನಿಗೆ ಕೊಡುತ್ತಿಲ್ಲ- ಬಡವರಿಗೆ ಕೊಡುತ್ತಿದ್ದೇವೆ, ಬಡವರ ವಿರುದ್ಧ ಇರುವ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಡೆಗೆ ನಮ್ಮ ಧಿಕ್ಕಾರ ಇರಲಿ ಎಂದು ಧಿಕ್ಕಾರದ ಘೋಷಣೆ ಕೂಗಿದರು.
ಬಿಜೆಪಿ ಅವರೂ ಅಕ್ಕಿ ಕೊಡದಿದ್ದರೂ ನಾವು ಕಾರ್ಯಕ್ರಮವನ್ನು ಜಾರಿ ಮಾಡುತ್ತೇವೆ, ಬಡವರಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಕೊಡುತ್ತೇವೆ, ಶಕ್ತಿ ಯೋಜನೆಯನ್ನು ಜನರು ಬಳಸಿಕೊಳ್ಳುತ್ತಿರುವುದನ್ನು ಕಂಡು ಬಿಜೆಪಿ ಅವರು ಸಹಿಸುತ್ತಿಲ್ಲ ಎಂದು ಆರೋಪ ಮಾಡಿದರು.
ಜಿಲ್ಲಾಡಳಿತ ಭವನದವರೆಗೂ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ರಸ್ತೆ ತಡೆ ನಡೆಸಿದ್ದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು, ಸರಕು ತುಂಬಿದ ಲಾರಿಗಳು ಸಾಲುಗಟ್ಟಿ ನಿಂತಿದ್ದವು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw