“ಕಠಿಣ ಕ್ರಮ ಕೈಗೊಳ್ಳದಿದ್ದರೆ ಸಾವು-ನೋವು ಹೆಚ್ಚಾಗಬಹುದು“
08/05/2021
ಹಾಸನ: ಕಾಟಾಚಾರದ ಲಾಕ್ ಡೌನ್ ಘೋಷಣೆಯಿಂದ ಕೊರೊನಾ ನಿಯಂತ್ರಣ ಸಾಧ್ಯವಿಲ್ಲ. ಮುಂಬೈ ಮಾದರಿಯ ಕಠಿಣ ಕ್ರಮಕೈಗೊಳ್ಳದಿದ್ದರೆ ಹೆಚ್ಚಿನ ಸಾವು ನೋವು ಸಂಭವಿಸುವ ಸಾಧ್ಯತೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಎಚ್ಚರಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಪರೀಕ್ಷೆ ಕಡಿಮೆ ಮಾಡುವಂತೆ ಆದೇಶಿಸಿರುವ ರಾಜ್ಯ ಸರ್ಕಾರ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.
ಜಿಲ್ಲೆಯಲ್ಲಿ ನಿತ್ಯ 5 ಸಾವಿರ ಗಂಟಲು ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿತ್ತು. ಆದರೆ, ಈಗ ಎರಡೂವರೆ ಸಾವಿರಕ್ಕೆ ಇಳಿಸಲಾಗಿದೆ. ಈ ಸಂಬಂಧ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಪಾಸಿಟಿವ್ ಪ್ರಕರಣ ಹೆಚ್ಚುತ್ತಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲು ಆಗುತ್ತಿಲ್ಲ ಎಂಬ ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ, ಹಣಕ್ಕಾಗಿ ಜನರ ಜೀವದೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.