ಏಪ್ರಿಲ್ 11ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ (ಏ.11) ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ನಗರದ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದ 224 ಕ್ಷೇತ್ರಗಳ ಬಗ್ಗೆ ದೆಹಲಿಯಲ್ಲಿ 2–3 ಬಾರಿ ಸುದೀರ್ಘ ಚರ್ಚೆ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರೂ ಚರ್ಚೆಯಲ್ಲಿ ಭಾಗವಹಿಸಿದ್ದರು. ಟಿಕೆಟ್ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.
ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು. ಚರ್ಚೆ ಮತ್ತು ವಿಧಾನಸಭೆಯ ಅಭ್ಯರ್ಥಿಗಳ ಪಟ್ಟಿಯನ್ನು ಗಮನಿಸಿದಾಗ ಬಿಜೆಪಿ ರಾಜ್ಯದಲ್ಲಿ ಬಹುಮತ ಪಡೆದು ಸರಕಾರ ರಚಿಸುವುದು ನಿಶ್ಚಿತ ಎಂಬ ಭಾವನೆ ಮೂಡಿದೆ ಎಂದು ನುಡಿದರು.
224 ಕ್ಷೇತ್ರಗಳ ಕುರಿತು ಸಭೆಯಲ್ಲಿ ಚರ್ಚೆ ಆಗಿದೆ. ಎಷ್ಟು ಜನರ ಪಟ್ಟಿ ಎಂಬ ಕುರಿತು ಅಂದಾಜಿಲ್ಲ. 15-20 ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ವಿವರವನ್ನು ನಾಳೆ ಬಿಡುಗಡೆ ಮಾಡಬಹುದು ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
ಹಾಲಿ ಶಾಸಕರಿಗೆ ಟಿಕೆಟ್ ನೀಡದಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಚರ್ಚೆಗಳು ನಡೆದಿವೆ. ಯಾರೋ ಮೂರ್ನಾಲ್ಕು ಜನರಿಗೆ ಸಿಗದೆ ಇರಬಹುದು. ಈ ವಿಷಯದಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw