ಮೀಸಲಾತಿ ಕಲ್ಪಿಸದೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯ: ಸಿದ್ದರಾಮಯ್ಯ
ಬೆಂಗಳೂರು: ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿಧಾನ ಮಂಡಲದ ಉಭಯ ಸದನ ನಾಯಕರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಗ್ಗಂಟಾಗಿ ಪರಿಣಮಿಸಿದೆ. ಹೀಗಾಗಿ ಮೀಸಲು ಸೌಲಭ್ಯ ಒದಗಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಬೇಕು. ಕಾನೂನಾತ್ಮಕವಾಗಿ ಪರಿಶೀಲಿಸಬೇಕು ಎಂದು ಅವರು ಹೇಳಿದರು.
ಮೀಸಲು ಸೌಲಭ್ಯ ಒದಗಿಸುವ ಮುನ್ನ ಸಮೀಕ್ಷೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಈಗಾಗಲೇ ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ಆ ವರದಿಯನ್ನು ಪರಿಗಣಿಸುವ ಸಾಧ್ಯತೆ ಕುರಿತಾಗಿಯೂ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಮತ್ತೊಂದು ಆಯೋಗವನ್ನು ರಚನೆ ಮಾಡಿ ಸಮೀಕ್ಷೆ ನಡೆಸುವುದು ಸೂಕ್ತ. ಅಲ್ಲಿಯವರೆಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬಾರದು. ಇಲ್ಲದಿದ್ದರೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗದಂತೆ ಆಗುತ್ತದೆ. ಆ ವರ್ಗಗಳಿಗೆ ಭಾರಿ ಅನ್ಯಾಯವಾಗುತ್ತದೆ. ಹಿಂದುಳಿದ ವರ್ಗದವರನ್ನು ಸಾಮಾನ್ಯ ವರ್ಗದಲ್ಲಿ ಸೇರಿಸಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಮೀಸಲು ಪ್ರಮಾಣ ಹೆಚ್ಚಿಸಬೇಕೆಂದ ಬೇಡಿಕೆ ಮುಂದಿಟ್ಟುಕೊಂಡು ವಾಲ್ಮೀಕಿ ಸಮುದಾಯದ ಸ್ವಾಮೀಜಿಯವರು ಕಳೆದ 50 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಆ ಬೇಡಿಕೆ ಈಡೇರಿಸುವ ಕುರಿತಾಗಿಯೂ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಸಚಿವರಾದ ಗೋವಿಂದ ಕಾರಜೋಳ, ಈಶ್ವರಪ್ಪ, ಮಾಧುಸ್ವಾಮಿ, ಕೋಟಾ ಶ್ರೀನಿವಾಸ ಪೂಜಾರಿ, ಬೈರತಿ ಬಸವರಾಜ್, ಎಂ.ಟಿ.ಬಿ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಜ್ಯೋತಿಷಿ ಮನೆ ದರೋಡೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಗಂಡಸ್ತನ ಪದ ಬಳಕೆ: ಎಚ್.ಡಿ.ಕುಮಾರಸ್ವಾಮಿ ವಿಷಾದ