ಗೃಹಲಕ್ಷ್ಮೀ ಯೋಜನೆಯ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ—ಸೊಸೆ!
ಗದಗ: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕೂಡಿಟ್ಟು ಅತ್ತೆ ಸೊಸೆ ಕೊಳವೆ ಬಾವಿ ಕೊರೆಸಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯಲ್ಲಿ ನಡೆದಿದೆ.
ಅತ್ತೆ ಮಾಬುಬೀ ಮಾಲಧಾರ್ ಹಾಗೂ ಸೊಸೆ ರೋಷನ್ ಬೇಗಂ ಮಾಲಧಾರ್ ಸೇರಿಕೊಂಡು ತಮ್ಮ ಜಮೀನಿನಲ್ಲಿ ಬೋರ್ ವೆಲ್ ಕೊರೆಸಿದ್ದಾರೆ. ಈ ಮೂಲಕ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಸದುಪಯೋಗಪಡಿಸಿಕೊಂಡಿದ್ದಾರೆ.
ಅತ್ತೆ ಸೊಸೆ ಇಬ್ಬರೂ ಕೂಡಿಟ್ಟ ಹಣ 44 ಸಾವಿರ ರೂಪಾಯಿಯಾಗಿತ್ತು. ಬೋರ್ ವೆಲ್ ಕೊರೆಸಲು 60 ಸಾವಿರ ಹಣ ಬೇಕಿತ್ತು. ಉಳಿದ ಹಣವನ್ನು ಇವರ ಮಗ ಭರಿಸಿ ಬೋರ್ ವೆಲ್ ಕೊರೆಸಿದ್ದಾರೆ.
ಇನ್ನೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಿಂದ ಬೋರ್ ವೆಲ್ ಕೊರೆಸಲು ಸಾಧ್ಯವಾಯಿತು ಎಂದಿರುವ ಕುಟುಂಬಸ್ಥರು, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: