ನಾಗಮಂಗಲ ಹೇಯ ಘಟನೆ ಒಂದು ಸಮುದಾಯದ ಅತಿಯಾದ ಓಲೈಕೆಯ ಫಲ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು–ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ.
ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ ಎಂದಿದ್ದಾರೆ.
ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ’ ಎಂದು ಕಿಡಿಕಾರಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97