ಪಾಕಿಸ್ತಾನದ ಬಲೂಚಿಸ್ತಾನ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ: ಇಬ್ಬರು ಮಕ್ಕಳು ಸೇರಿ ಮೂವರ ಸಾವು
ಬಲೂಚಿಸ್ತಾನದ ಪಿಶಿನ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸ್ಫೋಟದಲ್ಲಿ ಇಬ್ಬರು ಪೊಲೀಸರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ.
ಸುರ್ಖಾಬ್ ಚೌಕ್ ಬಳಿಯ ಮುಖ್ಯ ಮಾರುಕಟ್ಟೆಯಲ್ಲಿ ನಡೆದ ದಾಳಿಯು ಪೊಲೀಸ್ ಅಧಿಕಾರಿಗಳು ಮತ್ತು ಚೆಕ್ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆದ ಸರಣಿ ದಾಳಿಗಳಲ್ಲಿ ಇತ್ತೀಚಿನದ್ದು. ಇತ್ತೀಚಿನ ಘಟನೆಗಳು ಖೈಬರ್ ಪಖ್ತುನ್ಖ್ವಾ ಮತ್ತು ಬಲೂಚಿಸ್ತಾನದಲ್ಲಿ ಕೇಂದ್ರೀಕೃತವಾಗಿವೆ.
ಎಎನ್ಐ ಪ್ರಕಾರ, ಪಿಶಿನ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ವಕೀಲ್ ಶೆರಾನಿ ಅವರು ಇಂದು ಸ್ಫೋಟದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದ್ದಾರೆ.
ಆರಂಭದಲ್ಲಿ 14 ಮಂದಿ ಗಾಯಗೊಂಡಿದ್ದರು. ಅವರಲ್ಲಿ 13 ಮಂದಿಯನ್ನು ಕ್ವೆಟ್ಟಾ ಟ್ರಾಮಾ ಸೆಂಟರ್ ಗೆ ಕಳುಹಿಸಲಾಗಿದ್ದು, ಅಲ್ಲಿ ಓರ್ವ ಮಹಿಳೆ ನಂತರ ಮೃತಪಟ್ಟಿದ್ದಾಳೆ ಎಂದು ಆಸ್ಪತ್ರೆಯ ಅಧಿಕಾರಿಗಳ ಪಟ್ಟಿಯನ್ನು ಉಲ್ಲೇಖಿಸಿ ಡಾನ್ ವರದಿ ಮಾಡಿದೆ.
ಸ್ಥಳೀಯ ಪ್ರಾಧಿಕಾರದ ಪ್ರಕಾರ, ಸ್ಫೋಟಕ ವಸ್ತುಗಳನ್ನು ಬೈಕಲ್ಲಿ ಇರಿಸಲಾಗಿದ್ದು, ಇದು ಮೂರು ವಾಹನಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ) ಮತ್ತು ಬಾಂಬ್ ನಿಷ್ಕ್ರಿಯ ದಳವು ಸಾಕ್ಷ್ಯಗಳನ್ನು ಸಂಗ್ರಹಿಸಲು ತಕ್ಷಣ ಸ್ಥಳಕ್ಕೆ ಆಗಮಿಸಿತು. ಹೆಚ್ಚಿನ ತನಿಖೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth