ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಿಲ್ಲ ಎಂದ ಸುರೇಶ್ ಕುಮಾರ್!
ಬೆಂಗಳೂರು: ಕೊರೊನಾ ಇರುವ ಕಾರಣ 1ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದರೆ, ಇತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೇರೆಯೇ ಹೇಳಿಕೆ ನೀಡಿದ್ದಾರೆ.
ಒಂದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಸದ್ಯ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ನಾವು ಆ ಬಗ್ಗೆ ತೀರ್ಮಾನಿಸಿಲ್ಲ. ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತ ನಿರ್ಧಾರಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಸಚಿವರು ಮೊದಲು ಸರಿಯಾದ ನಿರ್ಧಾರ ತೆಗೆದುಕೊಂಡು ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡುವುದು ಉತ್ತಮ ಒಂದೇ ಸರ್ಕಾರದ ಇಬ್ಬರು ಸಚಿವರು ಒಂದು ವಿಷಯದ ಬಗ್ಗೆ ಬೇರೆ ಬೇರೆ ಹೇಳಿಕೆ ನೀಡಿ ಜನರನ್ನು ಗೊಂದಲಕ್ಕೆ ಸಿಲುಕಿಸುವುದು ಸರಿಯಲ್ಲ ಎಂಬ ಮಾತುಗಳು ಕೇಳಿ ಬಂದಿವೆ.