ಪೊಲೀಸ್ ಪೇದೆಯ ಮೇಲೆ ಕಾಂಗ್ರೆಸ್ ಶಾಸಕಿಯಿಂದ ಹಲ್ಲೆ? | ರಾಜಭವನ ಚಲೋ ವೇಳೆ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಯಿತೇ?
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್ ನಿಂದ ರಾಜಭವನದ ವರೆಗೆ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದು, ಈ ವೇಳೆ ಲೇಡಿ ಕಾನ್ಸ್ ಟೇಬಲ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿ ಅವರ ನಡುವೆ ತೀವ್ರ ವಾಗ್ವಾದ ನಡೆದಿದೆ.
ಪ್ರತಿಭಟನಾಕಾರರನ್ನು ಮಹಾರಾಣಿ ಕಾಲೇಜು ಬಳಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರನ್ನು ಸೌಮ್ಯಾ ರೆಡ್ಡಿ ತರಾಟೆಗೆತ್ತಿಕೊಂಡಿದ್ದಾರೆ. ಈ ವಾಗ್ವಾದ ಮುಂದುವರೆದು ಸೌಮ್ಯರೆಡ್ಡಿ ಅವರು ಪೊಲೀಸ್ ಪೇದೆಗೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಧರಣಿ ನಿರತರ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಪೊಲೀಸರ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಸೌಮ್ಯ ರೆಡ್ಡಿ ಅವರು ಪೊಲೀಸ್ ಪೇದೆಗೆ ಹಲ್ಲೆ ನಡೆಸಿದ್ದಾರೆ ಎಂಬ ವಿಚಾರಕ್ಕೆ ಮಾಧ್ಯಮಗಳು ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದೂ ಕಂಡು ಬಂದಿದೆ.