ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣ: ಮತದಾನ ಮುಗಿದ ಬೆನ್ನಲ್ಲೇ ಜರ್ಮನಿಗೆ ತೆರಳಿದ್ರಾ ಪ್ರಜ್ವಲ್ ರೇವಣ್ಣ!
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹರಿದಾಡುತ್ತಿರುವ ಪ್ರಕರಣ ರಾಜ್ಯದಲ್ಲಿ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಈಗಾಗಲೇ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತನಿಖೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ. ಈ ನಡುವೆ ಮತದಾನ ಮುಗಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಜರ್ಮನಿಗೆ ಹಾರಿದ್ದಾರೆ ಎಂದು ವರದಿಯಾಗಿದೆ.
ಲೋಕಸಭಾ ಚುನಾವಣೆ ಸಮಯದಲ್ಲೇ ಪ್ರಜ್ವಲ್ ರೇವಣ್ಣ ವಿಡಿಯೋ ಭಾರೀ ಸದ್ದು ಮಾಡುತ್ತಿದೆ. ವಿಡಿಯೋದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿದೆ. ಈ ನಡುವೆ ಶನಿವಾರ ಪ್ರಜ್ವಲ್ ಬೆಂಗಳೂರಿನಿಂದ ಜರ್ಮನಿಗೆ ಪ್ರಯಾಣ ಬೆಳೆಸಿರುವುದಾಗಿ ಹೇಳಲಾಗಿದೆ.
ಇನ್ನೂ ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋಗಳ ತುಣುಕು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಕೂಡ ಮೇಲ್ನೋಟಕ್ಕೆ ಕಂಡು ಬರುತ್ತಿರುವುದರಿಂದ ಎಸ್ ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದು, ಅವರ ಮನವಿಯ ಮೇರೆಗೆ ತನಿಖೆ ನಡೆಸಲು ನಿರ್ಣಯಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ಹಲವು ದಿನಗಳಿಂದಲೂ ಹಾಸನದ ವಿಡಿಯೋ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಸಾಕಷ್ಟು ಜನರು ವಿಡಿಯೋ ತುಣುಕುಗಳನ್ನು ನೋಡಿರುವುದಾಗಿ ಬರೆದುಕೊಳ್ಳುತ್ತಿದ್ದಾರೆ. ಕೆಲವೊಂದು ವಿಡಿಯೋಗಳಲ್ಲಿ ಹಿರಿಯ ವಯಸ್ಸಿನ ಮಹಿಳೆಯರಿಗೂ ದೌರ್ಜನ್ಯ ಎಸಗಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth