ಆರೆಸ್ಸೆಸ್-ಬಿಜೆಪಿಗೆ ಖಡಕ್ ವಾರ್ನಿಂಗ್ ನೀಡಿದ ರಾಹುಲ್ ಗಾಂಧಿ
ದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ಕೇವಲ ಕಲ್ಪನೆಯಲ್ಲಿ ಮಾತ್ರವೇ ಜಾರಿಯಲ್ಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರವನ್ನು ವಿರೋಧಿಸಿದವರನ್ನು ದೇಶದ್ರೋಹಿಗಳು ಎಂದು ಸರ್ಕಾರ ಬಿಂಬಿಸುತ್ತಿದೆ. ರೈತರು ಕಾರ್ಮಿಕರು ಅಥವಾ ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ಕೇಂದ್ರ ಸರ್ಕಾರವನ್ನು ಟೀಕಿಸಿದರೂ ಅವರನ್ನೂ ದೇಶದ್ರೋಹಿ ಪಟ್ಟದಲ್ಲಿ ಕೇಂದ್ರ ಸರ್ಕಾರ ಕೂರಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ ರಾಹುಲ್ ಗಾಂಧಿ, ರೈತರನ್ನು ಎದುರು ಹಾಕಿಕೊಳ್ಳಬೇಡಿ. ಅವರ ಪ್ರತಿಭಟನೆಯನ್ನು ನಿರ್ಲಕ್ಷಿಸಬೇಡಿ. ರೈತ ಸಮುದಾಯ ತಿರುಗಿ ಬಿದ್ದರೆ ಆರೆಸ್ಸೆಸ್ ಮತ್ತು ಬಿಜೆಪಿಗೆ ಕುತ್ತು ಬರಲಿದೆ ಎಂದರು.
ಕೇಂದ್ರ ಸರ್ಕಾರದ ನೀತಿಯ ವಿರುದ್ಧ ರಾಹುಲ್ ಗಾಂಧಿ ಗರಂ ಆಗಿದ್ದಾರೆ. ಇಂದು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯ ಸಭೆಯ ಕಾಂಗ್ರೆಸ್ ನಾಯಕ ಗುಲಾಂ ನಬೀ ಆಜಾದ್ ಅವರ ಜೊತೆ ರಾಹುಲ್ ಗಾಂಧಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದು, ಕೇಂದ್ರ ಸರ್ಕಾರವು ನೂತನ ಕೃಷಿ ಕಾಯ್ದೆಯ ಬಗ್ಗೆ ಚರ್ಚೆಗೆ ಆಸ್ಪದ ನೀಡುತ್ತಿಲ್ಲ. ರೈತರನ್ನು ಸಂಕಷ್ಟಕ್ಕೀಡು ಮಾಡುವ ಕಾಯ್ದೆಯನ್ನು ಮರಳಿ ಪಡೆಯದೇ ರೈತರು ಚಳವಳಿ ನಿಲ್ಲಿಸುವುದಿಲ್ಲ. ಕೇಂದ್ರ ಸರ್ಕಾರ ಜಂಟಿ ಸದನ ಕರೆದು ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ರಾಹುಲ್ ಗಾಂಧಿ ರಾಷ್ಟ್ರಪತಿಗೆ ಮನವಿ ಮಾಡಿದ್ದಾರೆ.