ಸಾವರ್ಕರ್ ಭಾವಚಿತ್ರಕ್ಕೆ ಆಕ್ಷೇಪ: ಹಲವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಾವರ್ಕರ್ ಭಾವಚಿತ್ರ ಪ್ರದರ್ಶಿಸಿದ್ದನ್ನು ಆಕ್ಷೇಪಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಲವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುಪುರ ಪಿಡಿಓ ಅಬೂಬಕರ್ ನೀಡಿರುವ ದೂರಿನಂತೆ ಸ್ಥಳೀಯರಾದ ಎ.ಕೆ.ರಿಯಾಝ್, ಮನ್ಸೂರ್, ಅಶ್ರಫ್, ಶಾಹಿಕ್ ಮೊದಲಾದವರ ಮೇಲೆ ಪ್ರಕರಣ ದಾಖಲಾಗಿದೆ.
ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ವೇಳೆ ಸ್ಥಳೀಯ ಬೆಥನಿ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡುತ್ತಿದ್ದರು. ಈ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಜೊತೆ ಸಾವರ್ಕರ್ ಭಾವಚಿತ್ರ ಪ್ರದರ್ಶಿಸಿದ್ದು, ಇದಕ್ಕೆ ಪ್ರೇಕ್ಷಕರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆರೋಪಿಗಳು ಆಕ್ಷೇಪಿಸಿದ್ದಾರೆ.
ಬಳಿಕ ಶಾಲೆಯ ಮುಖ್ಯೋಪಾಧ್ಯಾಯರ ಜೊತೆ ಮಾತಿನ ಚಕಮಕಿ ನಡೆಸಿ ಕ್ಷಮೆ ಯಾಚಿಸುವಂತೆ ಮಾಡಿದ್ದಾರೆ. ಆ ಮೂಲಕ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪಿಡಿಒ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka