ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಂದು ರಾತ್ರಿ ವಿಟ್ಲ ಪೊಲೀಸ್ ಠಾಣೆಗೆ ಮುತ್ತಿಗೆ ಸಾಧ್ಯತೆ

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಜೆಪಿ ಮುಖಂಡನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು, ಆರೋಪಿಯ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬಾತನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಆರೋಪಿ ಪ್ರಭಾವಿಯಾಗಿರುವ ಹಿನ್ನೆಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನ ನಡೆಯುತ್ತಿದೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರೂ, ಈವರೆಗೆ ಬಂಧನವಾಗದೇ ಇರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ಠಾಣೆಗೆ ಮುತ್ತಿಗೆ ಹಾಕುವ ಎಚ್ಚರಿಕೆ:
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು, ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡ ಮಹೇಶ್ ಎಂಬಾತ ಮೇಲೆ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಈ ಬಗ್ಗೆ ಪೋಕ್ಸೋ ಕಾಯ್ದೆಯಡಿ ದಾಖಲಾಗಿದೆ. ಈ ಘಟನೆ ಖಂಡನೀಯವಾಗಿದ್ದು, ತಕ್ಷಣವೇ ಆರೋಪಿಯ ಬಂಧನವಾಗದಿದ್ದರೆ, ವಿಟ್ಲ ಠಾಣೆಗೆ ಮುತ್ತಿಗೆ ಹಾಕುವುದಾಗಿ ಅವರು ಎಚ್ಚರಿಸಿದ್ದಾರೆ.
ಇಂದು ರಾತ್ರಿ 8 ಗಂಟೆಯೊಳಗೆ ಆರೋಪಿಯ ಬಂಧನವಾಗದಿದ್ದರೆ, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ದಿನೇಶ್ ಮೂಳೂರು ಎಚ್ಚರಿಕೆ ನೀಡಿದ್ದಾರೆ.
ಎಸ್.ಎಸ್.ಎಲ್.ಸಿ ಓದುತ್ತಿರುವ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಬಗ್ಗೆ ಬಾಲಕಿಯ ಪೋಷಕರು ದೂರು ದಾಖಲಿಸಲು ಹೋದ ವೇಳೆ ವಿಟ್ಲ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಮಾಹಿತಿ ಇದೆ. ಆರೋಪಿಯ ರಕ್ಷಣೆಗೆ ಪೊಲೀಸರು ಮುಂದಾಗದೇ, ನೊಂದ ಬಾಲಕಿಗೆ ನ್ಯಾಯ ಒದಗಿಸಲು ಮುಂದಾಗಬೇಕು. ತಕ್ಷಣವೇ ಆರೋಪಿ ಎಲ್ಲಿ ತಲೆಮರೆಸಿಕೊಂಡಿದ್ದರೂ ಬಂಧಿಸಿ, ಕಾನೂನು ರೀತಿಯ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: