10:56 AM Wednesday 12 - March 2025

ಎಸೆಸೆಲ್ಸಿ ಪರೀಕ್ಷೆ ನಡೆಸುತ್ತೇವೆ, ಯಾರನ್ನೂ ಫೇಲ್ ಮಾಡುವುದಿಲ್ಲ | ಸಚಿವ ಸುರೇಶ್ ಕುಮಾರ್

sslc exam
04/06/2021

ಬೆಂಗಳೂರು: ರಾಜ್ಯದಲ್ಲಿ ಈ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದರೂ, ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಎಸೆಸೆಲ್ಸಿ ಪರೀಕ್ಷೆ ನಡೆಸದೇ ಇರುವುದು ಸುಲಭವಲ್ಲ. ಯಾಕೆಂದರೆ,  ಎಸೆಸೆಲ್ಸಿ ಮಕ್ಕಳನ್ನು ಕಳೆದ ವರ್ಷದ ಆಧಾರದಲ್ಲಿ  ಪಾಸ್ ಮಾಡೋಣ ಎಂದರೆ,  ಕಳೆದ ವರ್ಷ 9ನೇ ತರಗತಿ ಪರೀಕ್ಷೆಯೇ ನಡೆದಿಲ್ಲ. ಕೆಲ ಸಮೀಕ್ಷೆಗಳಲ್ಲಿ ಪರೀಕ್ಷೆ ಬೇಡ ಅನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆದರೆ ಎಸೆಸೆಲ್ಸಿ ಪರೀಕ್ಷೆ ನಡೆಸದೇ ಇರುವುದು ಸುಲಭವಿಲ್ಲ ಎಂದು ಅವರು ಹೇಳಿದರು.

ಈ ಬಾರಿ 8 ಲಕ್ಷ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದಾರೆ.  ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಈ ಮೂರು ವಿಷಯಗಳನ್ನು ಸೇರಿಸಿ ಒಂದು ಪೇಪರ್ ನೀಡಲಾಗುತ್ತದೆ​, ಬಹು ಆಯ್ಕೆ ಪ್ರಶ್ನೆಗಳನ್ನು ಕೇಳಲಾಗುವುದು. ಪ್ರಶ್ನೆಗಳು ಸರಳ ಹಾಗೂ ನೇರವಾಗಿರಲಿದ್ದು, ವಿದ್ಯಾರ್ಥಿಗಳು ಆತಂಕಪಡುವ ಆಗತ್ಯವಿಲ್ಲ. ಇದೇ ರೀತಿ ಇನ್ನೊಂದು ಪತ್ರಿಕೆ ಭಾಷಾ ವಿಷಯಗಳು ಇರಲಿವೆ ಎಂದು ತಿಳಿಸಿದ್ದಾರೆ.

ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, 20 ದಿನ ಮುಂಚಿತವಾಗಿ ಪರೀಕ್ಷೆ ದಿನಾಂಕ ಘೋಷಣೆ ಮಾಡಲಾಗುವುದು. ಕೊವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಆಗದಿದ್ದರೆ. ಅಂತಹ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶವಿದೆ. ಹೊಸ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. 6 ಸಾವಿರ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಈ ಬಾರಿ ದುಪ್ಪಟ್ಟು ಕೇಂದ್ರಗಳಲ್ಲಿ ಪರೀಕ್ಷೆ ಮಾಡುತ್ತೇವೆ. ಒಂದು ಕೊಠಡಿಯಲ್ಲಿ 10-12 ಜನ ಕೂರಿಸಿ ಪರೀಕ್ಷೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಎಸೆಸೆಲ್ಸಿಯಲ್ಲಿ ಯಾರನ್ನೂ ಫೇಲ್​ ಮಾಡುವುದಿಲ್ಲ. ಮೊದಲೇ ಮಾದರಿ ಪ್ರಶ್ನೆ ಪತ್ರಿಕೆಯನ್ನು ನೀಡುತ್ತೇವೆ. ಅದನ್ನು ನೋಡಿಕೊಂಡು ಸಿದ್ಧತೆ ಮಾಡಿಕೊಳ್ಳಿ. ಒತ್ತಡವಾಗಲಿ, ಆತಂಕವಾಗಲೀ ಬೇಡ. ಅತ್ಯಂತ ಸರಳ ಹಾಗೂ ನೇರ ಪ್ರಶ್ನೆಗಳನ್ನಷ್ಟೇ ಕೇಳಲಾಗುವುದು. ಒಂದು ಡೆಸ್ಕ್‌ ಗೆ ಒಬ್ಬ ವಿದ್ಯಾರ್ಥಿಯನ್ನು ಕೂರಿಸುತ್ತೇವೆ. ಪರೀಕ್ಷೆ ಬರೆಯುವ ಎಲ್ಲರಿಗೂ ಎನ್95 ಮಾಸ್ಕ್ ನೀಡುತ್ತೇವೆ. ಮಾದರಿ ಪ್ರಶ್ನೆಪತ್ರಿಕೆ ಶಾಲೆಗಳಿಗೆ ಕಳಿಸಲು ವ್ಯವಸ್ಥೆ ಆಗಿದೆ. ವೆಬ್‌ ಸೈಟ್‌ನಲ್ಲೂ ಮಾದರಿ ಪ್ರಶ್ನೆಪತ್ರಿಕೆ ಹಾಕಲಾಗುವುದು. ಪರೀಕ್ಷೆಯಲ್ಲಿ ಯಾರನ್ನೂ ಫೇಲ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version