ಅರ್ಚಕನಿಗೆ ಹೆಚ್ಚು ಹಣ ಪಾವತಿಸಿರುವುದು ತಹಶೀಲ್ದಾರ್ ಅವರದ್ದೇ ತಪ್ಪು: ಸಿಎಂ ಸಿದ್ದರಾಮಯ್ಯ

24/01/2024
ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ನೀಡಿದ ವೇತನ ವಾಪಸ್ ಕೇಳಿ ನೋಟಿಸ್ ನೀಡಿರುವ ಪ್ರಕರಣ ತಿರುವು ಪಡೆದುಕೊಂಡಿದೆ.
ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರ್ ಅವರದ್ದೇ ತಪ್ಪೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿಗಳ ಅಧಿಕೃತ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಲಾಗಿದೆ.
ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಅನಗತ್ಯವಾಗಿ ಓಲೈಕೆಗೆ ಮುಂದಾಗುವ ಅಧಿಕಾರಿಗಳಿಗೆ ಸರ್ಕಾರ ಎಚ್ಚರಿಕೆ ನೀಡಿದಂತಾಗಿದೆ.