ಉದ್ದವ್ ಠಾಕ್ರೆಯವರೇ ಉದ್ದಟತನ ತೋರಿಸಿ ಸೌಹಾರ್ದತೆ ಕೆಡಿಸಬೇಡಿ | ಮಹಾರಾಷ್ಟ್ರ ಸಿಎಂಗೆ ಹೇಳಿಕೆಗೆ ಸಿಎಂ ಯಡಿಯೂರಪ್ಪ ಖಡಕ್ ಉತ್ತರ
ಬೆಂಗಳೂರು: ಬೆಳಗಾವಿ ನಮ್ಮದು ಎಂಬ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಹೇಳಿಕೆಯ ವಿರುದ್ಧ ಸಿಎಂ ಯಡಿಯೂರಪ್ಪ ಸರಣಿ ಟ್ವೀಟ್ ಮಾಡಿದ್ದು, ಇದೊಂದು ಉದ್ಧಟತನದ ಹೇಳಿಕೆಯಾಗಿದೆ. ಈ ರೀತಿಯ ಹೇಳಿಕೆಯಿಂದ ಸೌಹಾರ್ದತೆ ಕೆಡಿಸಬೇಡಿ ಎಂದು ಅವರು ಹೇಳಿದರು.
‘ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ