ಅಪಘಾತಕ್ಕೆ ವೈದ್ಯಕೀಯ ವೈದ್ಯ ವಿದ್ಯಾರ್ಥಿನಿ ಬಲಿ | ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ ಬೇಕು?
ಬೆಂಗಳೂರು: ರಸ್ತೆ ಹೊಂಡ ತಪ್ಪಿಸಲು ಯತ್ನಿಸಿದ ವೈದ್ಯ ವಿದ್ಯಾರ್ಥಿನಿಯೋರ್ವರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಲಿಂಗರಾಜಪುರಂ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ತಶ್ಬಿಕ್ ಬುಷ್ರಾ ಮೃತಪಟ್ಟವರಾಗಿದ್ದಾರೆ. ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ನೋಡಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ತಕ್ಷಣವೇ ಸ್ಥಳೀಯರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ರಸ್ತೆ ಗಂಡಾಗುಂಡಿಯಾಗಿರುವುದೇ ಈ ಅಪಘಾತಕ್ಕೆ ಕಾರಣವಾಗಿದೆ. ಒಂದು ವಿದ್ಯಾರ್ಥಿನಿಯ ಜೀವವೇ ಹೋಗಿದೆ ಎಂದು ಸ್ಥಳೀಯರು ಇದೇ ಸಂದರ್ಭದಲ್ಲಿ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾರಿ ಚಾಲಕ ಪಳನಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿಯ ತಂದೆ ಮುಷ್ತಾಕ್ ಅಹ್ಮದ್ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.