ನಿಮ್ಮಿಂದ ಪಾಠ ಕೇಳುವ ಅಗತ್ಯ ನಮಗಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ಛೀಮಾರಿ

ಅಂತರರಾಷ್ಟ್ರೀಯ ನೆರವಿನಿಂದ ಬದುಕುಳಿದವರು ನೀವು, ನಿಮ್ಮಿಂದ ಪಾಠ ಕೇಳುವ ಅಗತ್ಯ ನಮಗಿಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ಛೀಮಾರಿ ಹಾಕಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪಾಕಿಸ್ತಾನ ಮತ್ತೆ ಪ್ರಸ್ತಾಪಿಸಿದ್ದು, ಇದಕ್ಕೆ ಭಾರತ ತಿರುಗೇಟು ನೀಡಿದೆ.
ಜಿನೀವಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನದ ಕಾನೂನು ಮತ್ತು ಮಾನವ ಹಕ್ಕುಗಳ ಸಚಿವ ಅಜಮ್ ನಜೀರ್ ತರಾರ್, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವನ್ನು ದಮನಿಸಲಾಗುತ್ತಿದೆ ಮತ್ತು ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿದರು.
ಪಾಕಿಸ್ತಾನದ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಭಾರತೀಯ ರಾಯಭಾರಿ ಕ್ಷಿತಿಜ್ ತ್ಯಾಗಿ, ಪಾಕಿಸ್ತಾನ ಅಂತರಾಷ್ಟ್ರೀಯ ನೆರವುಗಳಿಂದ ಬದುಕುಳಿದಿರುವ ರಾಷ್ಟ್ರವಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಲ್ಪಸಂಖ್ಯಾತರ ಮೇಲಿನ ಕಿರುಕುಳ ಸೇರಿದಂತೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪಾಲಿಸದ ಪಾಕಿಸ್ತಾನವು ಭಾರತಕ್ಕೆ ಉಪನ್ಯಾಸ ನೀಡುವ ಮಟ್ಟದಲ್ಲಿಲ್ಲ ಎಂದು ತಿರುಗೇಟು ನೀಡಿದರು.
ಭಾರತ ಪ್ರಜಾಪ್ರಭುತ್ವ ಪ್ರಗತಿ ಮತ್ತು ತನ್ನ ಜನರ ಮೇಲಿನ ಗೌರವದ ಮೇಲೆ ಕೇಂದ್ರೀಕರಿಸುತ್ತದೆ. ಪಾಕಿಸ್ತಾನ ನಮ್ಮ ವಿರುದ್ಧ ಆರೋಪ ಮಾಡುವುದನ್ನು ನಿಲ್ಲಿಸಿ ತನ್ನದೇ ದೇಶದ ಜನರಿಗೆ ಉತ್ತಮ ಆಡಳಿತ ನೀಡುವತ್ತ ಗಮನಹರಿಸಬೇಕು ಎಂದು ಹೇಳಿದರು.
ವಿಶ್ವಸಂಸ್ಥೆಯ ಪಟ್ಟಿಯಲ್ಲಿರುವ ಹಲವಾರು ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನ ಆಶ್ರಯ ನೀಡುತ್ತದೆ. ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಸಮಯವನ್ನು ವ್ಯರ್ಥ ಮಾಡುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಭಾರತೀಯ ರಾಯಭಾರಿ ಕ್ಷಿತಿಜ್ ತ್ಯಾಗಿ ಗುಡುಗಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj